ಚಿಂತಾಮಣಿ(ಚಿಕ್ಕಬಳ್ಳಾಪುರ): ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ 14 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಸ್ಪತ್ರೆಯ ಹೊರಗುತ್ತಿಗೆ ಹಾಗೂ ಡಿ ಗ್ರೂಪ್ ನೌಕರರು ಇದೇ ತಿಂಗಳು ಮನೆಯಲ್ಲೇ ಪ್ರತಿಭಟನೆ ಮಾಡಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಖಾಯಂ ಕೆಲಸ ಸೇರಿದಂತೆ, ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸಾಕಷ್ಟು ಬಾರಿ ಮನವಿ ಸಲ್ಲಿಸಲಾಯಿತು. ಕಳೆದ ಬಾರಿ ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆ ನಡೆಸಿದ ವೇಳೆ ಸಮಸ್ಯೆಗಳನ್ನು ಬಗೆಹರಿಸುವುದಾಗಿ ತಿಳಿಸಿದ್ದರು. ಆದರೆ, ಸರ್ಕಾರ ಬದಲಾವಣೆಯಾದ ನಂತರ ನಮ್ಮ ಬೇಡಿಕೆಗಳನ್ನು ಮೂಲೆಗುಂಪು ಮಾಡಿದ್ದು, ಇದರ ಸಲುವಾಗಿಯೇ ಇಂದು ಮತ್ತು ನಾಳೆ ಯಾವುದೇ ಆಸ್ಪತ್ರೆಯ ವರದಿಗಳನ್ನು ಮೇಲಧಿಕಾರಿಗಳಿಗೆ ಸಲ್ಲಿಸದೇ ಬೇಡಿಕೆಗಳ ಈಡೇರಿಕೆಗಾಗಿ ಸೆ.24 ರಿಂದ ಕೆಲಸ ಬಹಿಷ್ಕರಿಸಿ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ನೌಕರರು ಮನೆಯಲ್ಲೇ ಇದ್ದು ಮುಷ್ಕರದಲ್ಲಿ ಭಾಗಿಯಾಗುವಂತೆ ಸೂಚಿಸಿದರು.
ಇದೇ ವೇಳೆ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದಿಂದ ತಾಲೂಕು ಆರೋಗ್ಯ ಅಧಿಕಾರಿಗಳು ಮತ್ತು ತಾಲೂಕು ಆಡಳಿತ ಅಧಿಕಾರಿಗೆ ಸಹಕಾರ ನೀಡುವಂತೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಆಸ್ಪತ್ರೆಯ ಹೊರಗುತ್ತಿಗೆ ಹಾಗೂ ಡಿ ಗ್ರೂಪ್ ನೌಕರರು ಉಪಸ್ಥಿತರಿದ್ದರು.