ಬಾಗೇಪಲ್ಲಿ (ಚಿಕ್ಕಬಳ್ಳಾಪುರ): ಕೊರೊನಾ ಸೋಂಕು ತಡೆಗಟ್ಟಲು ಹೇರಿದ್ದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅಧಿಕಾರ ಸ್ವೀಕಾರ ಸಮಾರಂಭ ಜೂನ್ 7ರಂದು ನಡೆಯಲಿದೆ.
ಸೋಂಕು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದ್ದು, ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಸಲು ಸಾಧ್ಯವಾಗುತ್ತಿಲ್ಲ. ಆದರಿಂದ ಬೆಂಗಳೂರಿನಲ್ಲಿ ಸೀಮಿತ ಮುಖಂಡರ ಸಮ್ಮುಖದಲ್ಲಿ ಸರಳ ಸಮಾರಂಭವನ್ನು ಏರ್ಪಡಿಸಲು ಸಿದ್ಧತೆ ನಡೆಸಲಾಗಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಾಮೂಹಿಕ ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣದ ಪೂರ್ವಭಾವಿ ಸಭೆಯಲ್ಲಿ ಹೇಳಿದರು.
ಎಲ್ಲ ಜಿಲ್ಲೆಗಳ ನಗರಸಭೆ, ಪುರಸಭೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಧಿಕಾರ ಸ್ವೀಕಾರ ಸಮಾರಂಭದ ವೀಕ್ಷಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಈ ಕಾರ್ಯಕ್ರಮಕ್ಕೆ ಸ್ಥಳೀಯ ಅಧಿಕಾರಿಗಳಿಂದ ಅನುಮತಿ ಪಡೆದುಕೊಳ್ಳಬೇಕು ಎಂದರು.
ಬೆಂಗಳೂರು ನಗರದಲ್ಲಿ ಸರಳ ಸಮಾರಂಭ ನಡೆಯಲಿದ್ದು, ಆಹ್ವಾನಿತರಿಗೆ ಮಾತ್ರ ಪ್ರವೇಶವಿರಲಿದೆ. ಎಲ್ಲ ಮುಖಂಡರು ಮತ್ತು ಕಾರ್ಯಕತರು ತಮ್ಮ ಊರುಗಳಲ್ಲಿ ಇದ್ದು ನೂತನ ಅಧ್ಯಕ್ಷರಿಗೆ ಶುಭ ಕೋರಬೇಕು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಎಲ್ಲರೂ ಮಾಸ್ಕ್ ಧರಿಸಿ, ಸುರಕ್ಷಿತ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಸ್ಥಳದಲ್ಲಿ ಸ್ಯಾನಿಟೈಸರ್ ಒದಗಿಸಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದು ಹೇಳಿದರು.