ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಮೊದಲ ಹಂತದ ಚುನಾವಣೆಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಭದ್ರತೆಯನ್ನು ಒದಗಿಸಲಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಮೊದಲ ಹಂತದ ಚುನಾವಣೆ ಚಿಂತಾಮಣಿ, ಬಾಗೇಪಲ್ಲಿ, ಶಿಡ್ಲಘಟ್ಟ ತಾಲೂಕಿನ ಒಟ್ಟು 748 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯಲಿದೆ. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.
ಜಿಲ್ಲೆಯ ಚಿಂತಾಮಣಿ ತಾಲೂಕು ವ್ಯಾಪ್ತಿಯಲ್ಲಿ ಅತಿಸೂಕ್ಷ್ಮ 31, ಸೂಕ್ಷ್ಮ 47, ಸಾಮಾನ್ಯ 237 ಮತಗಟ್ಟೆಗಳು ಇವೆ. ಶಿಡ್ಲಘಟ್ಟ ತಾಲೂಕು ವ್ಯಾಪ್ತಿಯಲ್ಲಿ ಅತಿಸೂಕ್ಷ್ಮ 20, ಸೂಕ್ಷ್ಮ 30, ಸಾಮಾನ್ಯ 152 ಮತಗಟ್ಟೆಗಳು. ಬಾಗೇಪಲ್ಲಿ ತಾಲೂಕು ವ್ಯಾಪ್ತಿಯಲ್ಲಿ ಅತಿಸೂಕ್ಷ್ಮ 23, ಸೂಕ್ಷ್ಮ 35, ಸಾಮಾನ್ಯ 173 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಒಟ್ಟು ಅತಿಸೂಕ್ಷ್ಮ 74, ಸೂಕ್ಷ್ಮ 112, ಸಾಮಾನ್ಯ 562 ಮತಗಟ್ಟೆಗಳೆಂದು ಪರಿಗಣಿಸಲಾಗಿದೆ.
ಓದಿ:ಮೈಸೂರಲ್ಲಿ ಮೊದಲ ಹಂತದ ಗ್ರಾಪಂ ಚುನಾವಣೆಗೆ ಸಿದ್ಧತೆ: ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ಮತಗಟ್ಟೆಗಳ ಬಳಿ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಚಿಂತಾಮಣಿ ತಾಲೂಕು ವ್ಯಾಪ್ತಿಯ ಮತಗಟ್ಟೆಗಳಲ್ಲಿ 416, ಬಾಗೇಪಲ್ಲಿ 314, ಶಿಡ್ಲಘಟ್ಟ ವ್ಯಾಪ್ತಿಯಲ್ಲಿ 278 ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಗೃಹರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.