ಬಾಗೇಪಲ್ಲಿ: ವಿದ್ಯಾಗಮ ವಿನೂತನ ಯೋಜನೆಯಾಗಿದ್ದು, ಇದನ್ನು ವಿದ್ಯಾರ್ಥಿ ಕೇಂದ್ರೀಕೃತವಾಗಿಸಿ ಪೋಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಸ್ವಯಂ ಸೇವಕರ ಸಹಭಾಗಿತ್ವದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ' ಎಂದು ವಿದ್ಯಾಗಮ ಯೋಜನೆಯ ನೋಡಲ್ ಅಧಿಕಾರಿ, ಚಿಕ್ಕಬಳ್ಳಾಪುರ ಡಯಟ್ ಉಪನ್ಯಾಸಕಿ ಲಕ್ಷ್ಮಮ್ಮ ಸೂಚಿಸಿದರು.
ತಾಲೂಕಿನ ಕಸಬಾ ಹೋಬಳಿ ಘಂಟಂವಾರಿಪಲ್ಲಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢಶಾಲೆಯ ವ್ಯಾಪ್ತಿಯ ಜನ ವಸತಿ ಪ್ರದೇಶವಾದ ಹೊಸಹುಡ್ಯ ಗ್ರಾಮಕ್ಕೆ ವಿದ್ಯಾಗಮ ನಿರಂತರ ಕಲಿಕಾ ಕಾರ್ಯಕ್ರಮದ ಅಡಿಯಲ್ಲಿ ನೋಡಲ್ ಅಧಿಕಾರಿ ಭೇಟಿ ನೀಡಿ, ಪ್ರಗತಿ ಪರಿಶೀಲನೆ ನಡೆಸಿದರು.
ವಿದ್ಯಾಗಮ ನಿರಂತರ ಕಲಿಕಾ ಕಾರ್ಯಕ್ರಮದ ಅಡಿಯಲ್ಲಿ ಹೊಸಹುಡ್ಯ ಗ್ರಾಮದ ಅರಳಿ ಕಟ್ಟೆ ಮೇಲೆ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕುಳಿತಿದ್ದರು. ಕಲಿಕೆಗೆ ಪೂರಕ ವಾತಾವರಣ ಸೃಷ್ಟಿಸುವಲ್ಲಿ ಶಾಲೆಯ ಶಿಕ್ಷಕರು ಕಾರ್ಯಪ್ರವೃತ್ತರಾಗಿದ್ದು, ಮಕ್ಕಳಿಗೆ ನಿರಂತರ ಕಲಿಕೆಗೆ ಪೂರಕವಾದ ವಾತಾವರಣ ಸೃಷ್ಟಿಸಿದ್ದಾರೆ ಎಂದು ಡಯಟ್ ಉಪನ್ಯಾಸಕಿ ಲಕ್ಷ್ಮಮ್ಮ ಹೇಳಿದರು.
ಕೋವಿಡ್-19 ಆತಂಕದ ಹಿನ್ನೆಲೆಯಲ್ಲಿ ಮಕ್ಕಳನ್ನು ಶಾಲೆಗೆ ಕರೆಸಬಾರದೆಂದು ಶಿಕ್ಷಣ ಇಲಾಖೆ ಆದೇಶಿಸಿರುವ ಕಾರಣಕ್ಕೆ ಮಕ್ಕಳ ಕಲಿಕೆಗೆ ತೊಂದರೆಯಾಗದಂತೆ ಶಿಕ್ಷಕರು ತಂಡಗಳನ್ನು ರಚಿಸಿ, ಕಲಿಕೆಗೆ ನೆರವಾಗುತ್ತಿದ್ದಾರೆ ಎಂದು ತಿಳಿಸಿದರು.
ಕೊರೊನಾ ಹಿನ್ನೆಲೆಯಲ್ಲಿ ಶಾಲೆಗಳು ಮುಚ್ಚಿರುವ ಈ ಸಂದರ್ಭದಲ್ಲಿ ಹಿರಿಯ ಪ್ರಾಥಮಿಕ ಶಾಲೆ ಹೊಸಹುಡ್ಯ ಹಾಗೂ ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಗೆ ನಿರಂತರ ಕಲಿಕೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಸಮರ್ಪಕವಾದ ಕ್ರಿಯಾ ಯೋಜನೆ ರೂಪಿಸಿ, ವಿದ್ಯಾಗಮ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಕಾರ್ಯರೂಪಕ್ಕೆ ತಂದಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.