ಚಿಕ್ಕಬಳ್ಳಾಪುರ: ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದ ಪ್ರವಾಸಿ ಮಂದಿರದಿಂದ ಅರೆಬೆತ್ತಲೆ ಮೆರವಣಿಗೆ ಸಾಗಿ ಚಿಂತಾಮಣಿ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ನಗರಸಭೆಯಲ್ಲಿ ಖಾತೆ ಬದಲಾವಣೆ ಮತ್ತು ಇ-ಖಾತೆ ಮಾಡಿಕೊಡಲು ಅಧಿಕಾರಿಗಳ ಬಹಳ ವಿಳಂಬ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮತ್ತು ದಲ್ಲಾಳಿಗಳ ಕಾಟ ಹೆಚ್ಚಾಗಿದೆ. ಇದಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.
ನಗರ ಸಭೆಯಲ್ಲಿ ಚುನಾವಣೆ ಗುರುತಿನ ಚೀಟಿ ತಿದ್ದುಪಡಿ ಸೇರಿದಂತೆ ಇನ್ನಿತರೆ ಆನ್ಲೈನ್ ಸೇವೆಯಲ್ಲಿ ಅರ್ಜಿ ಸಲ್ಲಿಸಿದರೆ ಸಕಾಲಕ್ಕೆ ಅಧಿಕಾರಿಗಳು ಕೆಲಸ ನಿರ್ವಹಿಸದೇ ವಿಳಂಬ ಮಾಡುತ್ತಿದ್ದಾರೆ. ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ನೀರು ಸರಬರಾಜಿನಲ್ಲಿ ತಾರತಮ್ಯದಿಂದಾಗಿ ಜನಸಾಮಾನ್ಯರು ಪರದಾಡುತ್ತಿದ್ದಾರೆ.
ನಗರದ ಸಾರ್ವಜನಿಕ ಆಸ್ಪತ್ರೆಯ ಹಿಂಭಾಗದ ಸೌದೆ ಮಂಡಿಯಲ್ಲಿ ಕಸದ ರಾಶಿ ಬಿದ್ದಿದ್ದು, ಅದನ್ನು ಕಾಲ ಕಾಲಕ್ಕೆ ವಿಲೇವಾರಿ ಮಾಡದೇ ಇರುವುದರಿಂದ ಆಸ್ಪತ್ರೆಯ ರೋಗಿಗಳಿಗೆ ಬಾಣಂತಿಯರು ಗರ್ಭಿಣಿಯರಿಗೆ, ಮಕ್ಕಳಿಗೆ ತೀವ್ರ ತೊಂದರೆಯಾಗಿ ಸಾಂಕ್ರಾಮಿಕ ರೋಗಗಳು ಹರಡುವಂತಾಗಿದೆ ಎಂದರು. ಜತೆಗೆ ಅಂಗಡಿಗಳ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲೇ ಹಾಕುವಂತೆ ಒತ್ತಾಯಿಸಿ ಫುಟ್ಪಾತ್ ವ್ಯಾಪಾರಿಗಳಿಗೆ ವ್ಯವಸ್ಥಿತ ಸ್ಥಳ ಗುರುತಿಸಿ ಕೊಡುವಂತೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ್ದರು.
ಪ್ರತಿಭಟನೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಸಿ. ಕೃಷ್ಣಾಜಿ ರಾವ್, ರಾಜ್ಯ ಸಂಚಾಲಕ ವೆಂಕಟರೆಡ್ಡಿ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.