ಚಿಕ್ಕಬಳ್ಳಾಪುರ: ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಹಾಗೂ ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ನಗರದ ಬಿ ಬಿ ರಸ್ತೆಯ ಸರ್ಕಾರಿ ಪ್ರೌಢಶಾಲೆ, ಬಿಜಿಎಸ್, ನ್ಯೂ ಹೊರೈಜಾನ್, ಸಂತ ಜೋಸೆಫ್ ಸೇರಿದಂತೆ ಮತ್ತಿತರ ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ಆರಂಭಕ್ಕೂ ಮುನ್ನ ಭೇಟಿ ನೀಡಿ ಪರಿಶೀಲಿಸಿ ಮಕ್ಕಳಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಆನ್ಲೈನ್ ಶಿಕ್ಷಣ ಪದ್ಧತಿಯನ್ನು ಅನುಷ್ಠಾನಕ್ಕೆ ತರಲಾಗುವುದು. ಅದಕ್ಕೂ ಮೊದಲು ರಾಜ್ಯದ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು, ತಜ್ಞರ ಅಭಿಪ್ರಾಯ ಪಡೆದ ನಂತರ ಯಾವ ರೀತಿಯಾಗಿ ಆನ್ಲೈನ್ ಶಿಕ್ಷಣ ಜಾರಿಗೆ ತರಬೇಕು ಎಂಬುದನ್ನು ನಿರ್ಧರಿಸುತ್ತೇವೆ ಎಂದು ಹೇಳಿದರು.
ಎಲ್ಕೆಜಿ ಹಾಗೂ ಯುಕೆಜಿಗೆ ಆನ್ಲೈನ್ ಶಿಕ್ಷಣ ಜಾರಿ ಇಲ್ಲ. ಮಾಡಬಾರದು ಕೂಡ. ಆದರೆ ಒಂದರಿಂದ ಆರು, ಏಳರಿಂದ ಹತ್ತನೇ ತರಗತಿಯವರೆಗೆ ಯಾವ ರೀತಿ ತಂತ್ರಜ್ಞಾನ ಬಳಸಿ ಮಕ್ಕಳಿಗೆ ಆನ್ಲೈನ್ ಶಿಕ್ಷಣ ನೀಡಬೇಕು ಎಂದು ತೀರ್ಮಾನಿಸುತ್ತೇವೆ. ಜೊತೆಗೆ ಯಾವ ರೀತಿ ಬೋಧನೆ ಮಾಡಬೇಕು ಎಂಬುದನ್ನು ತಜ್ಞರ ಸಮಿತಿ ನೀಡುವ ವರದಿ ಆಧರಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಕ್ಕಳ ಗೈರು ಹಾಜರಿಯಲ್ಲಿ ಅಷ್ಟೊಂದು ವ್ಯತ್ಯಾಸ ಕಂಡುಬಂದಿಲ್ಲ. ಮಕ್ಕಳಿಗೆ ಪರೀಕ್ಷಾ ಕೇಂದ್ರಗಳು ಸುರಕ್ಷಿತವಾಗಿವೆ. ಮಕ್ಕಳು ಉತ್ಸಾಹದಿಂದ ಪರೀಕ್ಷೆ ಬರೆಯುತ್ತಿದ್ದಾರೆ ಎಂದು ತಿಳಿಸಿದರು.