ಚಿಕ್ಕಬಳ್ಳಾಪುರ: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಸಂಬಂಧ ಇಂದು ಗೌರಿಬಿದನೂರು ನಗರದ ಸುಮಂಗಲಿ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಪಕ್ಷದ ರೂಪುರೇಷೆಗಳ ಬಗ್ಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಗೌರಿಬಿದನೂರು ಶಾಸಕ ಶಿವಶಂಕರ್ ರೆಡ್ಡಿ ಹಾಗೂ ಜಿಲ್ಲೆಯ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು.
ಕೊರೊನಾ ವೈರಸ್ ಭೀತಿ ಇರುವುದರಿಂದ ಎಲ್ಲರೂ ಪದಗ್ರಹಣ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಗ್ರಾಮಪಂಚಾಯ್ತಿ, ಹೋಬಳಿ ಮಟ್ಟದಲ್ಲಿ ಸ್ಕ್ರೀನಿಂಗ್ ಅಳವಡಿಸಲಾಗುತ್ತಿದ್ದು ಲೈವ್ ವೀಕ್ಷಿಸಬಹುದು. ಅದೇ ರೀತಿ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕೂಡಾ ನೇರಪ್ರಸಾರ ಇರಲಿದೆ ಎಂದು ತಿಳಿಸಿದರು.
ಕೊರೊನಾದಿಂದ ದೇಶದ ಆರ್ಥಿಕ ವ್ಯವಸ್ಥೆ ಕುಸಿದಿರುವ ಬಗ್ಗೆ ಮಾತನಾಡಿದ ಅವರು, ವಲಸಿಗರು ಊಟ ಇಲ್ಲದೆ ಪರದಾಡುವಂತಾಗಿದೆ. ಸರ್ಕಾರದ ಕೈಯ್ಯಲ್ಲಿ ಅಂತವರಿಗೆ ಇದುವರೆಗೂ ಊಟ ನೀಡಲಾಗಿಲ್ಲ. ಪ್ರಧಾನಿ ಮೋದಿ ಸಾಕಷ್ಟು ಪ್ಯಾಕೇಜ್ಗಳನ್ನು ಘೋಷಣೆ ಮಾಡಿದ್ದಾರೆ ಹೊರತು ಇದುವರೆಗೂ ಯಾವುದು ಅನುಷ್ಟಾನಕ್ಕೆ ಬಂದಿದೆ ಎಂಬುದು ಗೊತ್ತಿಲ್ಲ. ಇನ್ನು ರಾಜ್ಯ ಸರ್ಕಾರದ ಸಾಧನೆ ಶೂನ್ಯ. ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾತನಾಡುವುದು ಬಿಟ್ಟರೆ ಬೇರೆ ಕೆಲಸ ಮಾಡಿಲ್ಲ. ರೈತರಿಗೆ ಒಂದು ರೂಪಾಯಿ ಕೂಡಾ ನೀಡಿಲ್ಲ ಎಂದು ಶಾಸಕ ಶಿವಶಂಕರ್ ರೆಡ್ಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರದಲ್ಲಿ ಸಾಕಷ್ಟು ಗೊಂದಲಗಳಿವೆ. ಆದ್ದರಿಂದ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದರು. ಕಾಂಗ್ರೆಸ್- ಜೆಡಿಎಸ್ ಮೈತ್ರಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಳೆದ ಬಾರಿ ಅನಿವಾರ್ಯ ಕಾರಣದಿಂದ ಜೆಡಿಎಸ್ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದೆವು. ಈಗ ಹೇಗೆ ಎಂಬುದನ್ನು ಮುಂದಿನ ದಿನಗಳಲ್ಲಿ ಕಾದು ನೋಡಬೇಕು ಎಂದರು.