ಬಾಗೇಪಲ್ಲಿ: ಈ ಕೂಡಲೇ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯದಿದ್ದರೆ ರಾಜ್ಯ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆ ರಾಜ್ಯ ಉಪಾಧ್ಯಕ್ಷ ಮುನಿವೆಂಕಟಪ್ಪ ಎಂ.ಪಿ ಹೇಳಿದರು.
ಬಾಗೇಪಲ್ಲಿ ತಾಲೂಕಿನಲ್ಲಿ ನೂರಾರು ಜನ ರೈತರು ಮತ್ತು ಕೃಷಿ ಕೂಲಿಕಾರರು ಗೂಳೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಬೆಂಗಳೂರು ಚಲೋ ಹೋರಾಟಕ್ಕೆ ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ಕೃಷಿ ಮಸೂದೆಗಳನ್ನು ವಿರೋಧಿಸಿ ಹಲವು ಸಂಘಟನೆಗಳು ಇಂದು ಬೆಂಗಳೂರಿನಲ್ಲಿ ಐಕ್ಯ ಹೋರಾಟವನ್ನು ಹಮ್ಮಿಕೊಂಡಿವೆ.
ರೈತರ, ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳನ್ನು ವಿರೋಧಿಸಿ ಐಕ್ಯ ಹೋರಾಟ ನಡೆಯುತ್ತಿದೆ ಎಂದು ಹೇಳಿದರು. ರೈತ ಸಂಘಟನೆಗಳು, ದಲಿತ ಸಂಘಟನೆಗಳು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸದಸ್ಯರು ಬೆಂಗಳೂರು ರೈಲು ನಿಲ್ದಾಣದಿಂದ ಹೊರಟು ಫ್ರೀಡಂ ಪಾರ್ಕ್‌ವರೆಗೆ ದೊಡ್ಡಮಟ್ಟದ ರ್‍ಯಾಲಿ ನಡೆಸಿ, ನಂತರ ಅಲ್ಲಿಯೇ ಅನಿರ್ದಿಷ್ಟಾವಧಿ ಧರಣಿ ನಡೆಸಲು ಮುಂದಾಗಿರುವ ಕುರಿತು ತಿಳಿಸಿದರು.
ಸರ್ಕಾರ ಭೂಸುಧಾರಣೆ ಕಾಯ್ದೆಗಳಿಗೆ ತಿದ್ದುಪಡಿ ತಂದು ಅವುಗಳನ್ನು ರೈತವಿರೋಧಿ ಕಾಯ್ದೆಗಳನ್ನಾಗಿ ಮಾಡಲು ಹೊರಟಿದೆ. ಕೊರೊನಾ ಸಂಕಷ್ಟದ ನಡುವೆ ಈ ಕಾಯ್ದೆಗಳಿಗೆ ತಿದ್ದುಪಡಿ ತರುವ ಅಗತ್ಯವೇನಿತ್ತು?. ಭೂ ಒಡೆತನ, ಎಪಿಎಂಸಿ, ವಿದ್ಯುತ್ ಖಾಸಗೀಕರಣ ಮುಂತಾದ ಕಾಯ್ದೆಗಳ ತಿದ್ದುಪಡಿಗೆ ಸುಗ್ರೀವಾಜ್ಞೆ ತರಲಾಗಿದೆ.
ಈ ಮೂಲಕ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ನಾಡಿನ ರೈತ, ದಲಿತ ಮತ್ತು ಕಾರ್ಮಿಕ ಸಮುದಾಯವನ್ನು ಎದುರು ಹಾಕಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪಿ ಎಂ ಮುನಿವೆಂಕಟಪ್ಪ, ರಘುರಾಮ ರೆಡ್ಡಿ, ಸಾವಿತ್ರಮ್ಮ ಸೇರಿ ಮುಂತಾದವರು ಪಾಲ್ಗೊಂಡಿದ್ದರು.