ಚಿಕ್ಕಬಳ್ಳಾಪುರ: ಜಿಲ್ಲೆಯ ರೈಲ್ವೆ ನಿಲ್ದಾಣಗಳ ಪರಿಶೀಲನೆ ನಡೆಸುವ ವೇಳೆ ರೈಲ್ವೆ ಅಂಡರ್ ಪಾಸ್ ದುರಸ್ಥಿ ಸಂಭಂದಿಸಿದಂತೆ ಸಂಸದರಿಗೆ ಹಾಗೂ ರೈಲ್ವೆ ಅಧಿಕಾರಿಗಳಿಗೆ ಸಾರ್ವಜನಿಕರು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ರೈಲ್ವೆ ನಿಲ್ದಾಣದಲ್ಲಿ ಸಂಸದರು ಕರೆದಿದ್ದ ಕುಂದು ಕೊರತೆಗಳ ಸಭೆಯಲ್ಲಿ ಭಾಗವಹಿಸಿದ್ದ ನೂರಾರು ಪ್ರಯಾಣಿಕರು ಸಾರ್ವಜನಿಕರು ನಿಲ್ದಾಣದಲ್ಲಿ ಕುಡಿಯಲು ಶುದ್ಧ ನೀರಿಲ್ಲ, ಸ್ವಚ್ಚವಾದ ಶೌಚಾಲಯಗಳಿಲ್ಲದೇ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಅದರಿಂದ ಶೀಘ್ರದಲ್ಲಿ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಿ ಎಂದು ಮನವಿ ಮಾಡಿದರು.
ಅಂಡರ್ ಪಾಸ್ ದುರಸ್ತಿಗೆ ಒತ್ತಾಯ:
ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಬಹುತೇಕ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರೈಲ್ವೆ ಅಂಡರ್ ಪಾಸ್ಗಳು ಸಂಪೂರ್ಣ ಹದಗೆಟ್ಟಿದ್ದು, ಅಧಿಕಾರಿಗಳು ಹಾಗೂ ಸಂಸದರನ್ನು ಸಾರ್ವಜನಿಕರು ತರಾಟೆಗೆ ತಗೆದುಕೊಂಡರು.
ಇನ್ನು ಲೋಕಸಭೆ ಚುನಾವಣೆಗೂ ಮೊದಲು ಸಂಚರಿಸಿದ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿನ ಸಂಚಾರ ಕಳೆದ ಮೂರು ನಾಲ್ಕು ತಿಂಗಳುಗಳಿಂದ ಸ್ಥಗಿತಗೊಂಡಿದೆ. ಇದರಿಂದ ತಿರುಪತಿ, ದೆಹಲಿಗೆ ತೆರಳಲು ಸಮಸ್ಯೆಯಾಗಿದೆ. ಆದ್ದರಿಂದ ನಿಜಾಮುದ್ದೀನ್ ರೈಲು ಸಂಚಾರವನ್ನು ಮತ್ತೆ ಪ್ರಾರಂಭಿಸಬೇಕೆಂದು ಹಾಗೂ ಸರಕು ಸಾಗಾಣಿಕೆ ಮಾಡಲು ಗೂಡ್ಸ್ ರೈಲು ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಸಲ್ಲಿಸಿದರು.
ಸಾರ್ವಜನಿಕರ ಸಮಸ್ಯೆಗಳನ್ನು ಸ್ವೀಕರಿಸಿದ ಸಂಸದ ಎಸ್ ಮುನಿಸ್ವಾಮಿ ಅಧಿಕಾರಿಗಳಿಗೆ ಮಾಹಿತಿ ಮುಟ್ಟಿಸಿ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.