ಚಿಕ್ಕಬಳ್ಳಾಪುರ: ತಾಲೂಕಿನ ಮಸ್ತೇನಹಳ್ಳಿ ಬಳಿ ಇರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ಬೆಳಗ್ಗಿನ ತಿಂಡಿ ಸೇವಿಸಿ 41 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿರುವ ಘಟನೆ ನಡೆದಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸುಮಾರು 360 ವಿದ್ಯಾರ್ಥಿಗಳು ವಾಸವಾಗಿದ್ದರು. ಅಲ್ಲದೇ, ಬೆಳಗ್ಗಿನ ತಿಂಡಿ ಸೇವಿಸಿ ಸುಮಾರು ಮಕ್ಕಳಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಕೂಡಲೇ ಅಸ್ವಸ್ಥರನ್ನು ಕೈವಾರದ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಪರಿಣಾಮ, ಎಲ್ಲಾ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ. ಹೀಗಾಗಿ, ಪೋಷಕರು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ಮೊರಾರ್ಜಿ ದೇಸಾಯಿ ಶಾಲೆಯ ಮುಖ್ಯಸ್ಥರು ತಿಳಿಸಿದ್ದಾರೆ.
ಸದ್ಯ ಮಕ್ಕಳು ನಾಳೆಯವರೆಗೂ ಆಸ್ಪತ್ರೆಯಲ್ಲೇ ಇರಲಿದ್ದಾರೆ. ನಂತರ ಅವರನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಾಲೂಕಿನ ಆರೋಗ್ಯಾಧಿಕಾರಿ ಈಟಿವಿ ಭಾರತ್‌ಗೆ ತಿಳಿಸಿದ್ದಾರೆ.
ಈ ಮಾಹಿತಿ ತಿಳಿದ ತಕ್ಷಣ ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಇಂದಿರಾ ಕಬಾಡೆ, ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ ಪೂರ್ಣಿಮಾ, ತಾಲೂಕು ದಂಡಾಧಿಕಾರಿಗಳಾದ ಡಿ. ಹನುಮಂತರಾಯಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ. ಸ್ವಾತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಸಚಿವ ಅಶ್ವತ್ಥ್ ನಾರಾಯಣ್ ವಿರುದ್ಧ ಹಲ್ಲೆಗೆ ಮುಂದಾಗಿದ್ದು ಖಂಡನೀಯ: ಕಟೀಲ್