ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಬೇಕಾಗಿದ್ದ ಸರ್ಕಾರಿ ಕಾರ್ಯಕ್ರಮದಲ್ಲಿ ತೆಲುಗು ಹಾಡುಗಳನ್ನು ಹಾಕಿರುವ ವಿಚಾರ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.
ಬೋವಿ ಸಮಾದವತಿಯಿಂದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಹಿನ್ನೆಲೆಯಲ್ಲಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ರಾಜಕೀಯ ನಾಯಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಆದರೆ ಕಾರ್ಯಕ್ರಮದ ಪ್ರಾರಂಭಕ್ಕೂ ಮುನ್ನವೇ ತೆಲುಗು ಜಾನಪದ ಹಾಡುಗಳನ್ನು ಹಾಡಿಸಲಾಗಿದೆ. ಇದು ಅಲ್ಲಿ ನೆರೆದ ಜನರ ಅಸಮಾಧಾನಕ್ಕೆ ಕಾರಣವಾಗಿದೆ.
ಕಾರ್ಯಕ್ರಮಕ್ಕೆ ನೆರೆಯ ಆಂಧ್ರಪ್ರದೇಶದಿಂದ ಜಾನಪದ ಕಲಾವಿದರನ್ನು ಕರೆಯಿಸಿದ್ದೇಕೆ? ನಮ್ಮ ರಾಜ್ಯದಲ್ಲಿ ಜಾನಪದ ಕಲಾವಿದರ ಕೊರತೆ ಇದೆಯೇ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.