ಬಾಗೇಪಲ್ಲಿ(ಚಿಕ್ಕಬಳ್ಳಾಪುರ): ತಾಲೂಕಿನ ಬಹಳಷ್ಟು ಗ್ರಾಮಗಳಲ್ಲಿ ನೀರಿನ ಸಮಸ್ಯೆಗಳು ಎದುರಾಗುತ್ತಲೇ ಇವೆ. ಊರಿಗೆ ನೀರನ್ನು ಸರಬರಾಜು ಮಾಡುತ್ತಿದ್ದ ಕೊಳವೆ ಬಾವಿಗಳು ಬತ್ತಿ ಹೋಗುತ್ತಿವೆ. ನೀರಿಗಾಗಿ ಪ್ರತಿ ಮನೆಗೊಬ್ಬರು ಕಾದು ಕುಳಿತುಕೊಳ್ಳುವ ಪರಿಸ್ಥಿತಿಗಳನ್ನು ಎದುರಿಸಬೇಕಿದೆ.
ಸರ್ಕಾರದಿಂದ ಕೆಲ ಗ್ರಾಮಗಳಲ್ಲಿ ಕೊಳವೆ ಬಾವಿಗಳನ್ನು ಸುಮಾರು ಸಾವಿರ ಅಡಿಗಳವರೆಗೂ ಕೊರೆಯಿಸಿದರೂ ನೀರು ಸಿಗುತ್ತಿಲ್ಲ. ಹೀಗಿರುವಾಗ ಜಲ ಸಂರಕ್ಷಣೆಯ ಯೋಜನೆಗಳಲ್ಲಿ ಪರಿಣಾಮಕಾರಿಯಾಗಿ, ಪ್ರಾಮಾಣಿಕವಾಗಿ ಜಾರಿ ಮಾಡುವಲ್ಲಿ ಕೆಲವೆಡೆ ವಿಫಲವಾಗುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
ತಾಲೂಕಿನ ಹೊನ್ನಂಪಲ್ಲಿ ಗ್ರಾಮದಲ್ಲಿ ಗ್ರಾಮಕ್ಕೆ ಸರಬರಾಜು ಮಾಡುತ್ತಿದ್ದ ಕೊಳವೆ ಬಾವಿ ಬತ್ತಿ ಹೋಗಿದೆ. ಇತ್ತೀಚೆಗೆ ಹೊಸ ಕೊಳವೆ ಬಾವಿ ಕೊರೆಸಲಾಯಿತು. ಆದರೂ ನೀರು ಬಾರದೇ ವಿಫಲವಾಗಿದೆ. ಗ್ರಾಮಸ್ಥರ ಅನುಕೂಲಕ್ಕಾಗಿ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದೆ. ಮಳೆಯಾಗಿದ್ದು, ಕೃಷಿ ಚಟುವಟಿಕೆಗಳಿಗೆ ಹೋಗಬೇಕಾಗಿರುವುದರಿಂದ ಟ್ಯಾಂಕರ್ ಬರುವಿಕೆಗಾಗಿ ಮನೆಗೊಬ್ಬರಂತೆ ಕಾಯ್ಕೊಂಡಿರಬೇಕು. ಜಮೀನು ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆದಷ್ಟು ಬೇಗ ಮತ್ತೊಂದು ಕೊಳವೆ ಬಾವಿ ಕೊರೆಯಿಸಿ ಊರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥ ನರಸಿಂಹ ತಿಳಿಸಿದರು.
ನೀರಿಗಾಗಿ ನಿತ್ಯ ಗ್ರಾಮದಲ್ಲಿ ಜಗಳವಾಡುವಂತಹ ಪರಿಸ್ಥಿತಿ ಎದುರಾಗಿದೆ. ಇಲ್ಲಿ ಸ್ಥಳೀಯ ಮುಖಂಡರು ಗ್ರಾಮದಲ್ಲಿ ರಾಜಕೀಯ ಮಾಡುತ್ತಿದ್ದು, ಕೆಲವರಿಗೆ ತೊಂದರೆಯಾಗುತ್ತಿದೆ ಎಂದು ಗ್ರಾಮದ ನಿವಾಸಿಗಳು ತಿಳಿಸಿದರು.