ಚಿಕ್ಕಬಳ್ಳಾಪುರ: ಕೊರೊನಾ 2ನೇ ಅಲೆ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ ವೀಕೆಂಡ್ ಕರ್ಫ್ಯೂಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ನಿಯಮ ಮೀರಿ ಅನಗತ್ಯವಾಗಿ ಓಡಾಡುತ್ತಿದ್ದ 49 ದ್ವಿಚಕ್ರವಾಹನಗಳು, 3 ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ರೌಂಡ್ಸ್ ಮಾಡಿದ ತಾಲೂಕು ದಂಡಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಅನಾವಶ್ಯಕವಾಗಿ ಬೀದಿಗಿಳಿದ ಸಾರ್ವಜನಿಕರಿಗೆ ಲಾಠಿ ರುಚಿ ತೋರಿಸಿದರು.
ಬೆಳಗ್ಗೆ 10 ಗಂಟೆವರೆಗೆ ಮಾತ್ರ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿತ್ತು. ಆದರೂ ಕೆಲವರು ಸರ್ಕಾರದ ಆದೇಶಗಳನ್ನು ಗಾಳಿಗೆ ತೂರಿದ್ದು, ಅಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿ ಅಂಗಡಿಗಳನ್ನು ಬಂದ್ ಮಾಡಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ನಿಯಮ ಉಲ್ಲಂಘಿಸಿದ ಸುಮಾರು 49 ದ್ವಿಚಕ್ರ ವಾಹನಗಳು ಹಾಗೂ 3 ಕಾರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.