ಚಿಕ್ಕಮಗಳೂರು : ಗ್ರಾಮಗಳ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕಳೆದ 2018 ಚುನಾವಣೆ ನಂತರದಲ್ಲಿ ಹಿರೇಕೊಳಲೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 7 ಕೋಟಿ 42 ಲಕ್ಷ ರೂ. ಮಂಜೂರು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ .ರವಿ ಹೇಳಿದರು.
ಹಿರೇಕೊಳಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ಪ್ರವಾಸೋದ್ಯಮದ ಹಿತದೃಷ್ಟಿಯಿಂದ ಹಿರೇಕೊಳಲೆ ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು 2 ಕೋಟಿ 68 ಲಕ್ಷ ರೂ. ಬಿಡುಗಡೆಗೊಳಿಸಲಾಗಿದ್ದು, ಕಾಮಗಾರಿ ಪ್ರಾರಂಭವಾಗುವುದು ಮಾತ್ರ ಬಾಕಿ ಇದೆ ಎಂದರು.
ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆ ರಾಜ್ಯ, ಹೊರ ರಾಜ್ಯಗಳ ಪ್ರವಾಸಿಗರ ಗಮನ ಸೆಳೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲೆಯ ಮುಳ್ಳಯ್ಯನಗಿರಿ, ಕುದುರೆಮುಖ, ದೇವರಮನೆ, ಹಿರೇಕೊಳಲೆ, ಅಯ್ಯನಕೆರೆ ಹಾಗೂ ಗಿರಿಶ್ರೇಣಿ ಪ್ರದೇಶಗಳಿಗೆ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ ಎಂದರು.
ಈಗಾಗಲೇ ಚಿಕ್ಕಮಗಳೂರಿನಿಂದ ಬೇಲೂರಿಗೆ, ಬೇಲೂರಿನಿಂದ ಹಾಸನಕ್ಕೆ ರಾಷ್ಟ್ರೀಯ ಹೆದ್ದಾರಿಯ ಸಂಪರ್ಕ ಕಲ್ಪಿಸಲು ಕೇಂದ್ರ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಚರ್ಚಿಸಲಾಗಿದ್ದು, ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಭರವಸೆಯನ್ನು ಅವರು ನೀಡಿದ್ದಾರೆ. ಹಾಗೂ ಕಡೂರು-ಚಿಕ್ಕಮಗಳೂರು ಹಾಗೂ ಮೂಡಿಗೆರೆ ರಸ್ತೆಯ ಕಾಮಗಾರಿ ಪ್ರಾರಂಭವಾಗಿದ್ದು, ಸಾಕಷ್ಟು ಕೆಲಸ ಮುಗಿದಿವೆ ಮತ್ತು ಚಿಕ್ಕಮಗಳೂರಿನಿಂದ ಹಾಸನಕ್ಕೆ ರೈಲ್ವೆ ಸಂಪರ್ಕ ಕಲ್ಪಿಸುವುದಕ್ಕೂ ಈಗಾಗಲೇ ಮಂಜೂರಾತಿ ದೊರೆತಿದೆ ಎಂದರು.