ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದೂ ಕೂಡ ಧಾರಾಕಾರ ಮಳೆ ಮುಂದುವರೆದಿದ್ದು, ನದಿಗಳು ತುಂಬಿ ಹರಿಯುತ್ತಿವೆ.
ಜಿಲ್ಲೆಯ ಮಲೆನಾಡು ಪ್ರದೇಶ ಹಾಗೂ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಕಳಸ ಮತ್ತು ಹೊರನಾಡು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮುಳುಗಡೆಯಾಗಲು ಕೇವಲ ಒಂದು ಅಡಿ ಮಾತ್ರ ಬಾಕಿ ಉಳಿದಿದೆ. ಇದೇ ರೀತಿಯಾಗಿ ಮಳೆ ಮುಂದುವರೆದರೆ ಸೇತುವೆ ಮುಳುಗಡೆಯಾಗುವ ಸಾಧ್ಯತೆಯಿದೆ.
ನಿರಂತರ ಮಳೆಯಿಂದ ಜಿಲ್ಲೆಯ ಎಲ್ಲಾ ನದಿಗಳು ಮೈದುಂಬಿ ಹರಿಯುತ್ತಿದ್ದು, ಹೊರ ಮತ್ತು ಒಳ ಹರಿವಿನ ಪ್ರಮಾಣದಲ್ಲಿ ಭಾರಿ ಏರಿಕೆಯಾಗಿದೆ. ಕುದುರೆ ಮುಖ, ಕಳಸ, ಸಂಸೆ, ಬಾಳೆಹೊಳೆ, ಬಸ್ರೀಕಟ್ಟೆ, ತನಿಕೋಡು, ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿಯೂ ಧಾರಾಕಾರ ಮಳೆಯಾಗುತ್ತಿದೆ. ಶೃಂಗೇರಿ, ಎನ್ ಆರ್ ಪುರ, ಮೂಡಿಗೆರೆ, ಕೊಪ್ಪದಲ್ಲಿಯೂ ನಿರಂತರ ಮಳೆ ಮುಂದುವರೆದಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.