ಚಿಕ್ಕಮಗಳೂರು: ಜಿಲ್ಲೆಯಲ್ಲಿ ದಾಖಲಾಗಿರುವ ಎರಡು ಕೊರೊನಾ ಪ್ರಕರಣಗಳ ಮೂಲ ಇನ್ನು ಪತ್ತೆಯಾಗದಿರುವುದು ಜಿಲ್ಲಾಡಳಿತಕ್ಕೆ ಸವಾಲಾಗಿ ಪರಿಣಮಿಸಿದೆ.
ಜಿಲ್ಲೆಯಲ್ಲಿ ಮೂಡಿಗೆರೆಯ ಸರ್ಕಾರಿ ವೈದ್ಯ ಹಾಗೂ ತರೀಕೆರೆಯ ಗರ್ಭಿಣಿಗೆ ಸೋಂಕು ದೃಢಪಟ್ಟಿದ್ದು, ಇವರಿಬ್ಬರಿಗೂ ಸೋಂಕು ತಗುಲಿದ್ದಾದರೂ ಹೇಗೆ ಎಂಬ ಪ್ರಶ್ನೆ ಉದ್ಬವಾಗಿದೆ. ಇಬ್ಬರು ಸೋಂಕಿತರನ್ನು ಕ್ವಾರಂಟೈನ್ ಮಾಡಿ ಅವರೊಂದಿಗೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದ್ದವರನ್ನು ತಪಾಸಣೆಗೆ ಒಳಪಡಿಸಿದ್ದರೂ ಸೋಂಕಿನ ಮೂಲ ಪತ್ತೆಯಾಗಿಲ್ಲ.
ತರೀಕೆರೆಯ ಸೋಂಕಿತ ಮಹಿಳೆ ಮನೆ ಬಿಟ್ಟು ಎಲ್ಲೂ ಹೋಗಿಲ್ಲ. ಆದರೂ, ಆಕೆಗೆ ಸೋಂಕು ತಗುಲಿದೆ. ಮಹಿಳೆಯ ಸಂಬಂಧಿಕರು ಮತ್ತು ಕುಟುಂಬಸ್ಥರನ್ನು ಈಗಾಗಲೇ ಪರೀಕ್ಷೆಗೆ ಒಳಪಡಿಸಲಾಗಿದ್ದು, ಎಲ್ಲರ ವರದಿ ನೆಗೆಟಿವ್ ಬಂದಿದೆ. ಇದು ಜಿಲ್ಲಾಡಳಿತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಸೋಂಕಿನ ಮೂಲ ಹುಡುಕಲು ಈಗಾಗಲೇ 8 ತಂಡಗಳನ್ನು ರಚನೆ ಮಾಡಲಾಗಿದೆ. ಪ್ರತಿನಿತ್ಯ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ಸೋಂಕಿನ ಮೂಲ ಹುಡುಕುವುದರಲ್ಲಿ ನಿರತರಾಗಿದ್ದಾರೆ.