ಚಿಕ್ಕಮಗಳೂರು: ನೊಂದ ಮಹಿಳೆಯರು ಮತ್ತು ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಿ, ಸಾಂತ್ವನ ಹೇಳುವುದರ ಜೊತೆಗೆ ಕಾನೂನಿನ ಅಡಿಯಲ್ಲಿ ನೆರವು ನೀಡಬೇಕೆಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಹೇಳಿದರು.
ಮಹಿಳೆಯರು ಮತ್ತು ಮಕ್ಕಳ ಕಳ್ಳಸಾಗಣೆ ಹಾಗೂ ಬಾಲ್ಯ ವಿವಾಹ ನಿಷೇಧ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಲ್ಯ ವಿವಾಹವು ಸಮಾಜದ ಅನಿಷ್ಠ ಪದ್ಧತಿಯಾಗಿದೆ. ಇದನ್ನು ಹೋಗಲಾಡಿಸಲು ಪ್ರತಿಯೊಬ್ಬ ಸಾರ್ವಜನಿಕರು ಕೈಜೋಡಿಸಿದಾಗ ಮಾತ್ರ ಸಾಧ್ಯವಾಗುತ್ತದೆ. ಬಾಲ್ಯ ವಿವಾಹದಿಂದ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಮೇಲೆ ದುಷ್ಪರಿಣಾಮ ಬೀರುತ್ತದೆ. ಮಹಿಳೆ ಮತ್ತು ಮಕ್ಕಳ ಕಳ್ಳಸಾಗಣೆ ಬಗ್ಗೆ ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ. ಆದರೂ ಗ್ರಾಮೀಣ ಭಾಗದಲ್ಲಿ ಸಭೆಗಳನ್ನು ಮಾಡುವುದರೊಂದಿಗೆ ಸ್ಥಳೀಯರು ಸೇರಿದಂತೆ ಜನಪ್ರತಿನಿಧಿಗಳಿಗೆ ಇವುಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಇಂತಹ ಪ್ರಕರಣಗಳು ಕಂಡು ಬಂದಾಗ ಕ್ರಮ ಕೈಗೊಳ್ಳಬೇಕು.
ಬಾಲ್ಯ ವಿವಾಹ ತಡೆಯುವ ಸಂಬಂಧ ಜಿಲ್ಲೆಯಲ್ಲಿ ಮಕ್ಕಳ ಸಹಾಯವಾಣಿ 1098 ಕಾರ್ಯನಿರ್ವಹಿಸುತ್ತಿದೆ. ಬಾಲ್ಯ ವಿವಾಹದಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಪ್ರಸ್ತುತ ಸಾಲಿನಲ್ಲಿ 3 ಬಾಲ್ಯ ವಿವಾಹಗಳನ್ನು ತಡೆದು ಕಾನೂನು ಕ್ರಮ ಸಹ ತೆಗೆದುಕೊಳ್ಳಲಾಗಿದೆ. ದೌರ್ಜನ್ಯಕ್ಕೊಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಮಹಿಳಾ ವಿಶೇಷ ಚಿಕಿತ್ಸಾ ಘಟಕದಲ್ಲಿ ವೈದ್ಯಕೀಯ ಚಿಕಿತ್ಸೆ, ಸಮಾಲೋಚನೆ, ಪೊಲೀಸ್ ನೆರವು, ಕಾನೂನಿನ ನೆರವನ್ನು ಒಂದೇ ಸೂರಿನಡಿಯಲ್ಲಿ ನೀಡಲಾಗುತ್ತಿದೆ. ಈ ಘಟಕಗಳು ದಿನದ 24 ಗಂಟೆ ಕಾರ್ಯನಿರ್ವಹಿಸುತ್ತಿದ್ದು, ಉಚಿತ ಸಹಾಯವಾಣಿ ಸಂಖ್ಯೆ 181ಕ್ಕೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ.