ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸುರಿದ ಮಳೆ ಹಾಗೂ ಗುಡ್ಡ ಕುಸಿತದಿಂದ ನೂರಾರು ಕುಟುಂಬಗಳು ಬೀದಿಗೆ ಬಿದ್ದಿದ್ದು, ಸಂತ್ರಸ್ತರಿಗೆ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ನೀಡಲಾಗುತ್ತಿದೆ. ಇವುಗಳಲ್ಲಿ ಒಂದು ಪರಿಹಾರ ಕೇಂದ್ರ ಮಾತ್ರ ವಿನೂತನ ಪ್ರಯತ್ನಕ್ಕೆ ಕೈಹಾಕಿದೆ.
ಮೂಡಿಗೆರೆ ತಾಲೂಕಿನಲ್ಲಿ ಸಂತ್ರಸ್ತರಿಗಾಗಿ 27 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಸಂತ್ರಸ್ತರ ಸಣ್ಣ ಸಣ್ಣ ಮಕ್ಕಳು ಶಿಕ್ಷಣದಿಂದ ವಂಚಿತವಾಗಬಾರದು ಎನ್ನುವ ಉದ್ದೇಶದಿಂದ ಕೊಟ್ಟಿಗೆಹಾರ ಪರಿಹಾರ ಕೇಂದ್ರದಲ್ಲಿ ಅಂಗನವಾಡಿಯನ್ನು ಆರಂಭ ಮಾಡಲಾಗಿದೆ.
ಇಲ್ಲಿ ಅಂಗನವಾಡಿ ಶಿಕ್ಷಕರು ಮಕ್ಕಳಿಗೆ ಪಾಠ ಬೋಧನೆ ಮಾಡುತ್ತಿದ್ದಾರೆ. ಈ ಕೇಂದ್ರದಲ್ಲಿ ಆಲೇಖಾನ್ ಹೊರಟ್ಟಿ, ಮಧುಗುಂಡಿ, ಮಲೆಮನೆ, ಬಾಳೂರು ಹೊರಟ್ಟಿ, ಸೇರಿದಂತೆ ಸುತ್ತ ಮುತ್ತಲ ಗ್ರಾಮಗಳಲ್ಲಿ ಗುಡ್ಡ ಕುಸಿತದಿಂದ ನಿರಾಶ್ರಿತರ ಕೇಂದ್ರದಲ್ಲಿರುವ 20ಕ್ಕೂ ಹೆಚ್ಚು ಮಕ್ಕಳು ಇದರ ಸದುಪಯೋಗ ಪಡೆಯುತ್ತಿದ್ದಾರೆ. ಇನ್ನು ಶಿಕ್ಷಕರ ಈ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.