ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮತ್ತೆ ಕಾಡಾನೆಗಳು ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಮೂಡಿಗೆರೆ ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು, ಕಾಫಿ ತೋಟದ ಮಧ್ಯೆ ಓಡಾಡೋದನ್ನು ನೋಡಿದ ತೋಟದ ಮಾಲೀಕರು ಹಾಗೂ ಕಾರ್ಮಿಕರಲ್ಲಿ ಭಯ ಉಂಟುಮಾಡಿದೆ.
ಕಳೆದ ಮೂರು ದಿನಗಳ ಹಿಂದಷ್ಟೇ ಅರಣ್ಯ ಇಲಾಖೆ ಅಧಿಕಾರಿ ಚೇತನ್ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಾಗಿ ಅಧಿಕಾರಿ ಪ್ರಾಣಾಪಾಯದಿಂದ ಪಾರಾಗಿದ್ದರು. ಈಗ ಮತ್ತೆ ಈ ಭಾಗದಲ್ಲಿ ಕಾಡಾನೆ ಕಾಣಿಸಿಕೊಂಡಿದ್ದು ಜನರಲ್ಲಿ ಭೀತಿ ಹೆಚ್ಚಿಸಿದೆ.
ಹಾಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಶೀಘ್ರ ಆನೆಗಳನ್ನು ಕಾಡಿಗಟ್ಟುವ ಕೆಲಸ ಮಾಡಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.