ಚಿಕ್ಕಮಗಳೂರು: ಕಾಂಗ್ರೆಸ್ ಕಾರ್ಯಕರ್ತರು ದೂರು ಕೊಡುವ ನೆಪದಲ್ಲಿ ಶೋಭಾ ಕರಂದ್ಲಾಜೆ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಚಿಕ್ಕಮಗಳೂರು ಜಿಲ್ಲಾ ಎಸ್ಪಿಗೆ ದೂರು ನೀಡಿದ ಹಿನ್ನೆಲೆ, ಪೊಲೀಸರು 20ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ.
ಕಳೆದ ಎರಡೂ ದಿನಗಳ ಹಿಂದೆ ಸಂಸದೆ ಶೋಭ ಕರಂದ್ಲಾಜೆ ಜಿಲ್ಲಾ ಪಂಚಾಯತ್ನಲ್ಲಿ ಕೇಂದ್ರ ಸರ್ಕಾರದ ಪ್ರಾಯೋಜಿತ ಅಭಿವೃದ್ದಿ ಕಾರ್ಯಕ್ರಮಗಳ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಲು ಸಭೆಗೆ ಹೋಗುತ್ತಿದ್ದ ವೇಳೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಪಂಚಾಯತ್ ಗೇಟ್ನ ಮುಂಭಾಗದಲ್ಲಿ ಬೆಲೆಗಳ ಏರಿಕೆ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದರು. ಶೋಭ ಕರಂದ್ಲಾಜೆ ಗೇಟ್ ಮುಂಭಾಗ ಬರುತ್ತಿದ್ದಂತೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಮನವಿ ಕೊಡುವ ನೆಪದಲ್ಲಿ ಅವರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಜಿಲ್ಲಾ ಎಸ್ಪಿ ಅವರಿಗೆ ದೂರು ನೀಡಿದ್ದರು.
ದೂರಿನ ಅನ್ವಯ ಇಂದು ನಗರ ಪೋಲಿಸ್ ಠಾಣೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಂಶುಮತ್, ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯಿತ್ರಿ ಶಾಂತೇಗೌಡ, ಎಐಸಿಸಿ ಕಾರ್ಯದರ್ಶಿ ಸಂದೀಪ್ ಸೇರಿದಂತೆ 20 ಕ್ಕೂ ಹೆಚ್ಚು ಪ್ರತಿಭಟನಾ ನಿರತರ ಎಫ್ಐಆರ್ ದಾಖಲಾಗಿದೆ.