ಚಿಕ್ಕಮಗಳೂರು: ಕಳೆದ 21 ದಿನಗಳಿಂದ ಸತತವಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದನ್ನು ಖಂಡಿಸಿ ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತೊಗರಿ ಹಂಕಲ್ ವೃತ್ತದವರೆಗೂ ಸೈಕಲ್ ಜಾಥಾ ನಡೆಸಿದ ಮುಖಂಡರು, ಪ್ರತಿ ನಿತ್ಯ ಡೀಸೆಲ್ ಹಾಗೂ ಪೆಟ್ರೋಲ್ ಮೇಲಿನ ಬೆಲೆಯನ್ನು ಕೇಂದ್ರ ಸರ್ಕಾರ ಏರಿಕೆ ಮಾಡುತ್ತಿದೆ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಈಗಾಗಲೇ ಕೊರೊನಾ ವೈರಸ್ನಿಂದ ಹಲವಾರು ಜನರು ಕೆಲಸ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ಇಂಧನದ ಬೆಲೆ ಏರಿಕೆಯಾಗುತ್ತಿರುವುದರಿಂದ ಶ್ರೀಸಾಮಾನ್ಯನಿಗೆ ತುಂಬಾ ತೊಂದರೆಯಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ 50ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದು, ಕೇಂದ್ರ ಸರ್ಕಾರ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಬೆಲೆ ಕಡಿತ ಮಾಡಬೇಕು ಎಂದು ಆಗ್ರಹಿಸಿದರು.