ಚಿಕ್ಕಮಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಅಂಗವಾಗಿ, ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಜನಧ್ವನಿ ಎಂಬ ಶೀರ್ಷಿಕೆ ಅಡಿಯಲ್ಲಿ ಹೋರಾಟಕ್ಕೆ ಧ್ವನಿಯಾಗ ಬನ್ನಿ ಎಂದು ರಾಜ್ಯ ಸರ್ಕಾರದ ವಿರುದ್ಧ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಕೋರ್ಟ್ ಆವರಣದ ಪಕ್ಕದಲ್ಲಿರುವ ಗಾಂಧಿ ಪ್ರತಿಮೆಯ ಬಳಿ, ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ದು, ರಾಜ್ಯ ಬಿಜೆಪಿ ಸರ್ಕಾರ ರೈತ ವಿರೋಧಿಯಾಗಿದ್ದು, ಭೂ ಸುಧಾರಣೆ ಹಾಗೂ ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕೈಗಾರಿಕೆಗಳ ತಿದ್ದುಪಡಿಯನ್ನು ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಳೆದ ಹದಿನೈದು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ, ರಾಜ್ಯದ ವಿವಿಧ ಭಾಗಗಳಲ್ಲಿ ಅತಿವೃಷ್ಟಿ ಉಂಟಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಕಷ್ಟದಲ್ಲಿರುವ ಜನರಿಗೆ ಸರ್ಕಾರ ಪರಿಹಾರ ನೀಡುವಲ್ಲಿ ವಿಫಲಯಾಗಿದ್ದು, ರಾಜ್ಯ ಸರ್ಕಾರ ಮಾಡಿರುವ ಭ್ರಷ್ಟಾಚಾರವನ್ನು ಕೂಡಲೇ ತನಿಖೆಗೆ ಮಾಡಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು.
ಎಲ್ಲ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು. ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಇನ್ನೂ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನು ರಾಜ್ಯ ಸರ್ಕಾರಕ್ಕೆ ನೀಡಿ, ನಂತರ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.