ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ಸ್ಫೋಟವಾಗಿದೆ. ಶಾಲಾ-ಕಾಲೇಜುಗಳು ಕಠಿಣ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ಆರಂಭವಾಗಿದ್ದರೂ ಕೂಡ, ಮಲೆನಾಡು ಭಾಗದ ಶಾಲಾ ಮಕ್ಕಳಲ್ಲಿ ಕೋವಿಡ್ ಸೋಂಕು ಹೆಚ್ಚಾಗಿ ಕಂಡು ಬರುತ್ತಿದೆ.
Private school seal down : ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಕೊರೊನಾ ತಗುಲಿದೆ. ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 10 ಜನ ವಿದ್ಯಾರ್ಥಿಗಳಲ್ಲಿ ಹಾಗೂ ಓರ್ವ ಶಿಕ್ಷಕರಲ್ಲಿ ಕೋವಿಡ್ ಪತ್ತೆಯಾಗಿದೆ. ಈ ಹಿನ್ನೆಲೆ ಶಾಲೆಯನ್ನು ಒಂದು ವಾರಗಳ ಕಾಲ ಸೀಲ್ ಡೌನ್ ಮಾಡುವಂತೆ ಜಿಲ್ಲಾಧಿಕಾರಿ ಕೆ. ಎಂ. ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.
ಸೋಂಕಿಗೆ ತುತ್ತಾಗಿರುವ ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಮನೆಯಲ್ಲೇ ಐಸೋಲೇಷನ್ ಮಾಡಿ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ. ಸ್ಥಳಕ್ಕೆ ವೈದ್ಯಾಧಿಕಾರಿಗಳು ಹಾಗೂ ಅಧಿಕಾರಿಗಳು ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಹಾಗೂ ಮಾಹಿತಿ ಪಡೆದಿದ್ದಾರೆ.
ಈ ಹಿಂದೆಯೂ ಕೂಡ ಜಿಲ್ಲೆಯ ಕೊಪ್ಪ ತಾಲೂಕಿನ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಕೊರೊನಾ ಸೋಂಕು ಪತ್ತೆಯಾಗಿತ್ತು. ಅನಗತ್ಯವಾಗಿ ಭಯಪಡದೆ ಎಚ್ಚರದಿಂದ ಜಾಗೃತರಾಗಿರಬೇಕೆಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆದರೆ ದಿನದಿಂದ ದಿನಕ್ಕೆ ಈ ರೀತಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆತಂಕ ಮನೆ ಮಾಡಿದೆ.