ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇನ್ನೊಂದೆಡೆ ಇಲ್ಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಕೂಡ ಹೆಚ್ಚಳವಾಗ್ತಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮೂಡುವಂತೆ ಮಾಡಿದೆ.
ಜಿಲ್ಲೆಗೆ ಬರುವಂತಹ ಪ್ರವಾಸಿಗರಿಗೆ ನಿರ್ಬಂಧ ಹೇರುವಂತೆ ಸ್ಥಳೀಯರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಆದರೆ ಪ್ರವಾಸಿಗರನ್ನು ತಡೆಯುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂಬ ಆರೋಪಗಳು ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರನ್ನು ರಸ್ತೆಯಲ್ಲಿಯೇ ತಡೆದು ಜನರು ಪ್ರಶ್ನಿಸುತ್ತಿದ್ದಾರೆ. ಮೂಡಿಗೆರೆ ತಾಲೂಕಿನ ದೇವವೃಂದ ಹಾಗೂ ದೇವರಮನೆ ಪ್ರವಾಸಿ ತಾಣಗಳಿಗೆ ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಹೀಗಾಗಿ ಪ್ರವಾಸಿಗರನ್ನು ರಸ್ತೆಯಲ್ಲಿ ತಡೆಯುವುದರ ಮೂಲಕ ಸ್ಥಳೀಯರೇ ಪ್ರಶ್ನೆ ಮಾಡುತ್ತಿದ್ದಾರೆ.
ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದ ಪ್ರವಾಸಿಗರಿಗೆ ಅಡ್ಡ ಹಾಕಿ ಹಾಗೂ ಒಂದೇ ಕಾರಿನಲ್ಲಿ ಅನೇಕರು ಆಗಮಿಸುವುದನ್ನು ನೋಡಿ ಸ್ಥಳೀಯರು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ನೀವು ಯಾವ ಕಾರಣದಿಂದ ಇಲ್ಲಿನ ಪ್ರವಾಸಿ ತಾಣಗಳಿಗೆ ಬರುತ್ತಿದ್ದೀರಿ? ಒಂದು ವೇಳೆ ನಿಮ್ಮಿಂದ ಏನಾದರೂ ಕೊರೊನಾ ಸೋಂಕು ಈ ಭಾಗದಲ್ಲಿ ಹರಡಿದರೆ ಅದರ ಜವಾಬ್ದಾರಿ ಯಾರು ತೆಗೆದುಕೊಳ್ತಾರೆ? ಕೊರೊನಾ ವೈರಸ್ ಆರ್ಭಟ ಮುಗಿಯುವವರೆಗೂ ಇಲ್ಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಬರಬೇಡಿ ಎಂದು ಸ್ಥಳೀಯರೇ ಪ್ರವಾಸಿಗರಿಗೆ ಮನವಿ ಮಾಡುತ್ತಿದ್ದಾರೆ.