ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 10 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 152 ಕ್ಕೆ ಏರಿಕೆಯಾಗಿದೆ.
ಈ ದಿನ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ 9 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 93 ಜನ ಸೋಂಕಿತರು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಇಂದು ಚಿಕ್ಕಮಗಳೂರು ತಾಲೂಕಿನ 9 ಜನರಲ್ಲಿ, ಕಡೂರು ತಾಲೂಕಿನ ಓರ್ವರಲ್ಲಿ ಸೋಂಕು ಪತ್ತೆಯಾಗಿದೆ. ಈಗಾಗಲೇ ಸೋಂಕಿಗೆ ಜಿಲ್ಲೆಯಲ್ಲಿ ಐದು ಜನರು ಸಾವನ್ನಪ್ಪಿದ್ದು, ಇಂದು ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ.
ಇನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 152 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 54 ಸಕ್ರಿಯ ಪ್ರಕರಣಗಳಿವೆ.