ಪುತ್ತೂರು/ಕಾರವಾರ/ಚಿಕ್ಕಮಗಳೂರು: ವಿವಿಧೆಡೆ ಕಾನೂನು ಪ್ರಾಧಿಕಾರ ಸೇವೆಗಳ ಸಮಿತಿ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಕೋವಿಡ್-19 ಅಭಿಯಾನ ಜಾಗೃತಿ ಜಾಥಾ ಕಾರ್ಯಾಕ್ರಮಕ್ಕೆ ಚಾಲನೆ ನೀಡಲಾಗಿದೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿ, ತಾಲೂಕು ಕಾನೂನು ಸೇವೆಗಳ ಸಮಿತಿ, ಪುತ್ತೂರು ವಕೀಲರ ಸಂಘ ಹಾಗೂ ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕೋವಿಡ್-19 ಅಭಿಯಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಶನಿವಾರ ನ್ಯಾಯಾಲಯದ ಆವರಣದಲ್ಲಿ ಚಾಲನೆ ನೀಡಲಾಯಿತು. 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರುಡೊಲ್ಫ್ ಪಿರೇರಾ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಕಾರವಾರ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ವಿಪುಲಾ ಎಂ.ಬಿ.ಪೂಜಾರ ಕೋವಿಡ್-19 ಜನಾಂದೋಲನ ಅಭಿಯಾನಕ್ಕೆ ಚಾಲನೆ ನೀಡಿ ಪ್ರತಿಜ್ಞಾವಿಧಿ ಬೋಧಿಸಿದರು. ಇದೇ ವೇಳೆ ಮಾತನಾಡಿದ ಅವರು, ಕೊರೋನಾ ವೈರಸ್ ಯಾರಿಗೂ ಕಾಣದ ವೈರಸ್ ಆಗಿದ್ದು, ಈ ವೈರಸ್ ಪ್ರತಿಯೊಬ್ಬರಲ್ಲೂ ಕಂಡು ಬರುತ್ತಿರುವುದರಿಂದ ಈ ಬಗ್ಗೆ ಎಲ್ಲರೂ ಸದಾ ಜಾಗೃತರಾಗಿರುವುದು ಅತ್ಯಗತ್ಯವಾಗಿದೆ ಎಂದರು.
ಚಿಕ್ಕಮಗಳೂರು ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯೋಜಿಸಿದ್ದ ಕೋವಿಡ್-19 ಜನಾಂದೋಲನ ಜಾಗೃತಿ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶುಭ ಗೌಡರ್ ಚಾಲನೆ ನೀಡಿದರು.