ಚಿಕ್ಕಮಗಳೂರು : ಜೂನ್ 25 ರಿಂದ ಆರಂಭವಾಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಡಿಡಿಪಿಐ ನಂಜಯ್ಯ ಹೇಳಿದರು.
ಜಿಲ್ಲೆಯಲ್ಲಿ ಒಟ್ಟು 58 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರವನ್ನು ಸ್ಯಾನಿಟೈಸ್ ಮಾಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಒಟ್ಟು 13.924 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ, ಪರೀಕ್ಷಾ ಕೇಂದ್ರಕ್ಕೆ ಬರುವಂತಹ ಮಕ್ಕಳಿಗೆ ಆರೋಗ್ಯ ತಪಾಸಣೆ ಕೂಡ ಮಾಡಲು ಆರೋಗ್ಯ ಇಲಾಖೆ ಸಿಬ್ಬಂದಿಗಳು ಸಿದ್ಧರಾಗಿದ್ದಾರೆ. ಬರುವಂತಹ ಎಲ್ಲಾ ಮಕ್ಕಳಿಗೂ ಮಾಸ್ಕ್ ವಿತರಣೆ ಮಾಡಲಾಗುತ್ತಿದೆ. ಪ್ರತಿಯೊಬ್ಬ ಮಕ್ಕಳಿಗೂ ಸ್ಯಾನಿಟೈಸ್ ಮಾಡಲಾಗುವುದು ಎಂದು ತಿಳಿಸಿದರು.
ಕಡೂರು ತಾಲೂಕಿನಲ್ಲಿ ಓರ್ವ ಎಸ್ಎಸ್ಎಲ್ಸಿ ವಿದ್ಯಾರ್ಥಿಗೆ ಕೊರೊನ ಪಾಸಿಟಿವ್ ಬಂದಿದ್ದು, ಆ ವಿದ್ಯಾರ್ಥಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಆ ವಿದ್ಯಾರ್ಥಿ ಕೂಡ ಬೇರೊಂದು ಕೊಠಡಿಯಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಬರುವ ಮಕ್ಕಳಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಮುಂಜಾಗ್ರತೆ ವಹಿಸಲಾಗಿದೆ. ಜಿಲ್ಲೆಯ ವಿವಿಧ ಸ್ಥಳಗಳಿಗೆ ಒಟ್ಟು 60 ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.