ಚಿಕ್ಕಮಗಳೂರು: ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಕಾಮಗಾರಿಗಳ ಶಂಕು ಸ್ಥಾಪನೆಯನ್ನು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ನೆರೆವೇರಿಸಿದರು. ಈ ವೇಳೆ ಮಾತನಾಡಿದ ಅವರು, ಜಿಲ್ಲೆಗೆ ವಿವಿಧ ಕಾಮಗಾರಿ ಯೋಜನೆಗಳಿಗಾಗಿ 959 ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ಈ ಅನುದಾನದಲ್ಲಿ ಮೂಡಿಗೆರೆ ಹಾಗೂ ಕಳಸ ಭಾಗದ ವಸತಿ ಶಾಲೆಗಳ ಕಟ್ಟಡಗಳ ನಿರ್ಮಾಣಕ್ಕೆ, ₹ 90 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 536 ಕಿ.ಮೀ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಹೆದ್ದಾರಿ ಹಾಗೂ 98 ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಹಾಗೂ ರಸ್ತೆಗಳ ನವೀಕರಣಕ್ಕಾಗಿ ಹಣ ಬಿಡುಗಡೆ ಮಾಡಲಾಗಿದೆ ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಲೋನಿಗಳ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಕ್ಕಾಗಿ ಹಾಗೂ ಕಾಮಗಾರಿಗಳಿಗೆ 51 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ 115 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, ಉಳಿದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು. ಭೂ ಒಡೆತನ, ಗಂಗಾ ಕಲ್ಯಾಣ, ಸ್ವ-ಉದ್ಯೋಗ ಕೈಗೊಳ್ಳಲು ಆದ್ಯತೆ ನೀಡುವುದು ಸರ್ಕಾರದ ಉದ್ದೇಶವಾಗಿದೆ ಎಂದರು.