ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಕಠಿಣ ಲಾಕ್‍ಡೌನ್‍ನನ್ನು ಮತ್ತೆ ನಾಲ್ಕು ದಿನಗಳ ಕಾಲ ಮುಂದುವರೆಸಿದೆ. ಆದರೆ, ಜನರ ಅನುಕೂಲಕ್ಕಾಗಿ ಈ ಲಾಕ್‍ಡೌನ್‌ನಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಡಿಸಿ ಕೆ.ಎನ್.ರಮೇಶ್, ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚಿದ್ದರೂ ಕೂಡ ಕಳೆದ ನಾಲ್ಕು ದಿನಗಳ ಹಿಂದೆ ಇದ್ದಷ್ಟು ಪ್ರಕರಣಗಳು ಈಗಿಲ್ಲ. ಗ್ರಾಮೀಣ ಭಾಗದಲ್ಲಿನ ತೊಂದರೆಗಳು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಗ್ರಾಮೀಣ ಭಾಗದಲ್ಲಿ ಜನರ ಅನುಕೂಲಕ್ಕಾಗಿ ಬೆಳಗ್ಗೆ 6ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ, ಜನರು ಒಂದೆಡೆಯಿಂದ ಮತ್ತೊಂದೆಡೆಗೆ ಸಂಚರಿಸುವಂತಿಲ್ಲ ಎಂದು ತಿಳಿಸಿದರು.
ಕೃಷಿ ಚಟುವಟಿಕೆಗೆ ಬೇಕಾದ ಅಗತ್ಯ ವಸ್ತುಗಳನ್ನು ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲೇ ಖರೀದಿಸಬಹುದಾಗಿದೆ. ಒಂದೆಡೆಯಿಂದ ಮತ್ತೊಂದೆಡೆಗೆ ಅಥವಾ ನಗರ ಪ್ರದೇಶಗಳಿಗೆ ಭೇಟಿ ನೀಡುವಂತಿಲ್ಲ. ಪುರಸಭೆ, ಪಟ್ಟಣ ಪಂಚಾಯಿತಿ, ನಗರಸಭೆ ವ್ಯಾಪ್ತಿಯಲ್ಲಿ ಯಾವುದೇ ಅಂಗಡಿ-ಮುಂಗಟ್ಟುಗಳನ್ನು ತೆರೆಯುವಂತಿಲ್ಲ. ಹೋಟೆಲ್ ಹಾಗೂ ದಿನಸಿ ಅಂಗಡಿಗಳಲ್ಲಿ ಹೋಂ ಡೆಲಿವರಿಗೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದರು.
ಇದನ್ನೂ ಓದಿ: ಕೊರೊನಾದಿಂದ ಕಾಪಾಡು ತಂದೆ... ಗಾಣಗಾಪುರ ದತ್ತಾತ್ರೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ
ಉಳಿದಂತೆ ನಗರದಲ್ಲಿ ಹಾಪ್ಕಾಮ್ಸ್ಗಳಲ್ಲಿ ಬೆಳಗ್ಗೆ 6 ರಿಂದ ಸಂಜೆ 6 ರವರಗೆ ಹೋಂ ಡೆಲಿವರಿಗೆ ಅವಕಾಶ ಇದೆ. ಹಣ್ಣು-ತರಕಾರಿಯನ್ನು ಇಡೀ ದಿನ ಬೀದಿ ಬದಿಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.