ಚಿಕ್ಕಮಗಳೂರು: ಜಿಲ್ಲೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ವಿವಿಧ ಯೋಜನೆಗಳ ಅಡಿ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದರು.
ಸಖರಾಯಪಟ್ಟಣ ಹಾಗೂ ಬಾಣೂರಿನಲ್ಲಿ ಗ್ರಾಮ ಪಂಚಾಯತ್ ಮಳಿಗೆ, ರಸ್ತೆಗಳು ಹಾಗೂ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಮತ್ತು ಸ್ತ್ರೀ ಶಕ್ತಿ ಭವನವನ್ನು ಉದ್ಘಾಟಿಸಿ ನಂತರ ಮಾತನಾಡಿದ ಅವರು, ಸಖರಾಯಪಟ್ಟಣಕ್ಕೆ ಅದರದ್ದೇ ಆದ ಇತಿಹಾಸವಿದ್ದು, ಈ ಪಟ್ಟಣಕ್ಕೆ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು.
ಕಳೆದ ಬಾರಿ ಇಲ್ಲಿಗೆ ಭೇಟಿ ನೀಡಿದ್ದಾಗ ಮಸೀದಿ ರಸ್ತೆ ಮಾಡಿ ಕೊಡುವುದಾಗಿ ಭರವಸೆ ನೀಡಿದ್ದೆ. ಈಗ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 30 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿ ರಸ್ತೆಯನ್ನು ನಿರ್ಮಿಸಲಾಗಿದೆ. ಅಯ್ಯನಕೆರೆ ಅಭಿವೃದ್ಧಿಗೆ ಈ ಹಿಂದೆ ಎರಡು ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿತ್ತು. ಆದರೆ ಈ ಬಾರಿ ಪ್ರವಾಸೋದ್ಯಮವನ್ನು ಹೆಚ್ಚಿನದಾಗಿ ಅಭಿವೃದ್ಧಿಗೊಳಿಸುವ ಉದ್ದೇಶದಿಂದ ಪುನಃ ಎರಡು ಕೋಟಿ ಬಿಡುಗಡೆಗೊಳಿಸಲಾಗಿದೆ. ಜೊತೆಗೆ ಸಖರಾಯಪಟ್ಟಣ, ಹಸ್ತಿನಾಪುರ ಮತ್ತು ಕುಮಾರಗಿರಿ ರಸ್ತೆಗೆ ಮೂರು ಕೋಟಿ ರೂ.ಗಳ ಕಾಮಗಾರಿ ನಡೆಸಲಾಗುವುದು ಎಂದರು.
ಪಟ್ಟಣದಲ್ಲಿ ನಿರ್ಮಿಸಲಾಗಿರುವ ಯಾತ್ರಿ ನಿವಾಸವು ಕಳಪೆ ಕಾಮಗಾರಿಯಿಂದ ಕೂಡಿದೆ ಎನ್ನುವ ದೂರುಗಳು ಕೇಳಿ ಬಂದಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಲಾಗುವುದು ಎಂದು ಹೇಳಿದರು.