ಚಿಕ್ಕಮಗಳೂರು: ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಜಿಲ್ಲೆಯ ಮಲೆನಾಡು ಭಾಗವಾದ ಕೊಪ್ಪ, ಜಯಪುರ, ಎನ್ಆರ್ ಪುರ, ಬಾಳೆಹೊನ್ನೂರು, ಕಳಸ, ಶೃಂಗೇರಿ, ಮೂಡಿಗೆರೆ, ಚಾರ್ಮಡಿ ಘಾಟ್ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಭದ್ರಾ, ತುಂಗಾ, ಹೇಮಾವತಿ ನದಿಗಳು ಉಕ್ಕಿ ಹರಿಯುತ್ತಿದ್ದು, ಎಲ್ಲಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಳಸದ ಹೆಬ್ಬಾಳೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ರಸ್ತೆ ಸಂಚಾರವೂ ಅಸ್ತವ್ಯಸ್ತವಾಗಿದೆ.
ಮೂಡಿಗೆರೆ ತಾಲೂಕಿನ ಹೊರಟ್ಟಿಯಲ್ಲಿ ಆವಾಂತರ ಸೃಷ್ಟಿಯಾಗಿದ್ದು, ಹೊರಟ್ಟಿ ಗ್ರಾಮದ ರಾಜು ಗೌಡ ಎಂಬುವರ ಮೋಟಾರು ಮನೆ, ಕಾಫಿ, ಅಡಿಕೆ, ಬಾಳೆ ಸಂಪೂರ್ಣ ಕೊಚ್ಚಿ ಹೋಗಿದೆ. ಮೋಟಾರು ಮನೆಯು ಹೇಮಾವತಿ ನದಿಯಲ್ಲಿ ಕೊಚ್ಚಿ ಹೋಗಿದ್ದು, ಸುಮಾರು 10 ಲಕ್ಷ ನಷ್ಟ ಉಂಟಾಗಿದೆ. ಮಲೆನಾಡು ಭಾಗದಲ್ಲಿ ನಿರಂತರ ಧಾರಾಕಾರ ಮಳೆ ಮುಂದುವರೆದಿದ್ದು, ಈ ಭಾಗದ ಜನರು ಕಂಗಾಲಾಗಿದ್ದಾರೆ.