ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ಗಂಟೆಯಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಚಿಕ್ಕಮಗಳೂರು ನಗರ ಸೇರಿದಂತೆ ಮೂಡಿಗೆರೆ, ಕೊಟ್ಟಿಗೆಹಾರ, ಬಣಕಲ್, ಚಾರ್ಮಾಡಿ ಘಾಟಿ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಎನ್.ಆರ್ ಪುರ, ಶೃಂಗೇರಿ ಸೇರಿದಂತೆ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
ಮಳೆಯಿಂದ ವಾಹನ ಸಂಚಾರ ಕೂಡ ಅಸ್ತವ್ಯಸ್ತವಾಗಿದೆ. ಜಿಲ್ಲೆಯ ಬಯಲುಸೀಮೆ ಭಾಗವಾದ ತರೀಕೆರೆ, ಕಡೂರಲ್ಲೂ ಮಳೆ ಪ್ರಾರಂಭವಾಗಿದ್ದು, ಕಳೆದ ಎರಡು ಮೂರು ದಿನಗಳ ನಂತರ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ.
ನಿರಂತರ ಮಳೆ ಸುರಿಯುತ್ತಿರುವ ಕಾರಣ ಮಲೆನಾಡು ಭಾಗದಲ್ಲಿ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಮಲೆನಾಡು ಭಾಗದ ಹಲವಾರು ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದೆ.