ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಭಾರಿ ಗಾಳಿ ಮಳೆಗೆ ಬೃಹತ್ ಮರಗಳು ಧರೆಗುರುಳಿವೆ. ಕಳಸ ತಾಲೂಕಿನ ಚನ್ನಹಡ್ಲು ಗ್ರಾಮದಲ್ಲಿ ಭಾರಿ ಗಾಳಿಗೆ ನೂರಾರು ವರ್ಷದ ಬೃಹತ್ ಬೀಟೆ ಮರ ಧರೆಗುರುಳಿದ್ದರಿಂದ ಸುಮಾರು ಎರಡು ಗಂಟೆಗಳ ಕಾಲ ಕಳಸ ಹಾಗೂ ಚನ್ನಹಡ್ಲು ಗ್ರಾಮದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿತ್ತು. ಬಳಿಕ ಸ್ಥಳೀಯರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಮರವನ್ನ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಇನ್ನು ಕಳಸ ತಾಲೂಕಿನ ಕಲ್ಮಕ್ಕಿ ಎಂಬ ಗ್ರಾಮದ ಬಳಿ ಮನೆ ನಿರ್ಮಾಣದ ಕಾಮಗಾರಿಗೆ ಎಂ.ಸ್ಯಾಂಡ್ ಮರಳನ್ನು ಕೊಂಡೊಯ್ಯುತ್ತಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಟಿಪ್ಪರ್ ಲಾರಿ ಚಾಲಕ ಹಾಗೂ ಕ್ಲೀನರ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಲಾರಿ ಪಲ್ಟಿ ಆಗುತ್ತಿದ್ದಂತೆ ಸ್ಥಳೀಯರು ಚಾಲಕ ಹಾಗೂ ಕ್ಲೀನರ್ ನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಲೆನಾಡಿನಾದ್ಯಂತ ಕಳೆದೊಂದು ವಾರದಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಜೊತೆಗೆ ವೇಗವಾಗಿ ಬಿಸುತ್ತಿರುವ ಗಾಳಿಯಿಂದ ಮರಗಳು ನೆಲಕಚ್ಚುತ್ತಿವೆ. ಮಲೆನಾಡಿನ ಹಲವು ಗ್ರಾಮಗಳಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ಇದರ ನಡುವೆ ಮರ ಗಿಡಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನರು ಕತ್ತಲಲ್ಲಿ ಕಾಲ ಕಳೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತ ಹವಾಮಾನ ಇಲಾಖೆ, ನೀಡಿರುವ ಮುನ್ಸೂಚನೆಯ ಪ್ರಕಾರ ಚಿಕ್ಕಮಗಳೂರು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಮುಂದಿನ 2 ರಿಂದ 3 ದಿನಗಳು ಮೋಡ ಕವಿದ ವಾತಾವರಣ ಹಾಗೂ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವಿದೆ ಎಂದು ಜಿಲ್ಲಾ ಕೃಷಿ ಹವಾಮಾನ ಘಟಕದ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
ಜಿಲ್ಲೆಯ ಮಲೆನಾಡು ತಾಲೂಕುಗಳಾದ ಕೊಪ್ಪ, ಮೂಡಿಗೆರೆ, ಎನ್.ಆರ್.ಪುರ, ಶೃಂಗೇರಿ ಹಾಗೂ ಚಿಕ್ಕಮಗಳೂರು ತಾಲೂಕಿಗಳಲ್ಲಿ ಮುಂದಿನ 2 ರಿಂದ 3 ದಿನಗಳಲ್ಲಿ ಕಾಲ ಭಾರೀ ಮಳೆಯಾಗಲಿದೆ. ಇನ್ನು ತರೀಕೆರೆ ಹಾಗೂ ಕಡೂರು ತಾಲೂಕುಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಆದ್ದರಿಂದ ರೈತರು ಗೊಬ್ಬರ ಹಾಕುವುದು, ಬಿತ್ತನೆ ಚಟುವಟಿಕೆಗಳು ಹಾಗೂ ಕೃಷಿ ಚಟುವಟಿಕೆಗಳನ್ನು ಮುಂದಿನ 2 ರಿಂದ 3 ದಿನಗಳವರೆಗೆ ಮುಂದೂಡುವುದು ಸೂಕ್ತ ಎಂದು ಜಿಲ್ಲಾ ಕೃಷಿ ಹವಾಮಾನ ಘಟಕ ತಿಳಿಸಿದೆ.
ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ ಮಾಡಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ. ಸಾರ್ವಜನಿಕರು, ಪ್ರವಾಸಿಗರು ಹೊಳೆ - ನದಿಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಮಳೆ ಬರುವ ಸಮಯದಲ್ಲಿಯಾಗಲಿ ಅಥವಾ ಮಳೆ ನಿಂತ ಸಮಯದಲ್ಲಿಯಾಗಲಿ ವಿದ್ಯುತ್ ಕಂಬ, ಮರಗಳ ಕೆಳಗೆ ನಿಲ್ಲದಂತೆ ಸೂಚನೆ ನೀಡಿದೆ. ಸಾರ್ವಜನಿಕರು ಜಿಲ್ಲಾಡಳಿತದ ನಿರ್ದೇಶನವನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಪ್ರಕಟಣೆ ಮೂಲಕ ಮನವಿ ಮಾಡಿದೆ.
ಮತ್ತೊಂದೆಡೆ, ಕೊಡಗಿನಲ್ಲಿ ಮಳೆ ಚುರುಕುಗೊಂಡಿದ್ದು ಕಾವೇರಿ ಉಗಮ ಸ್ಥಾನ ತಲಕಾವೇರಿಯ ಭಾಗಮಂಡಲದಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ಜಿಲ್ಲೆಯ ಕರೆ ಕಟ್ಟೆಗಳು ತುಂಬಿ ಹರಿಯುತ್ತಿವೆ. ನಿರಂತರ ಮಳೆಯಿಂದ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಇನ್ನೂ ಜಿಲ್ಲೆಯಲ್ಲಿ ಧಾರಾಕಾರ ಗಾಳಿ ಮಳೆಯಿಂದ ಅಲ್ಲಲ್ಲಿ ಮರಗಳು ಧರೆಗುರುಳಿರುವುದರಿಂದ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದ್ದು, ಮರಗಳನ್ನು ತೆರವು ಗೊಳಿಸುವ ಕಾರ್ಯಚರಣೆ ನಡೆಯುತ್ತಿದೆ. ಮಳೆಯಿಂದ ಕಾವೇರಿ ನದಿಯ ಉಪನದಿಗಳು ಮೈದುಂಬಿ ಹರಿಯುತ್ತಿವೆ.
ಇದನ್ನೂ ಓದಿ:Dakshina Kannada Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಗೆ ಓರ್ವ ಬಲಿ: ರೆಡ್ ಅಲರ್ಟ್, ಶಾಲೆಗಳಿಗೆ ರಜೆ ಘೋಷಣೆ