ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳ ಹಿಂದೆ ಸುರಿದ ಧಾರಾಕಾರ ಮಳೆಯಿಂದ ಉಂಟಾಗಿದ್ದ ಅತಿವೃಷ್ಟಿ ಹಾಗೂ ಹಾನಿಗೊಳಗಾದ ಪ್ರದೇಶಗಳಿಗೆ ಸಚಿಸ ಜೆ.ಸಿ.ಮಾಧುಸ್ವಾಮಿ ಭೇಟಿ ನೀಡಿ ಪರಿಶೀಲಿಸಿ ನ್ಯಾಯಯುತ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.
ಹಿರೇಮಗಳೂರು ದೊಡ್ಡಕೆರೆ ಏರಿ ಬಿರುಕು ಬಿಟ್ಟಿರುವ ಸ್ಥಳವನ್ನು ವೀಕ್ಷಿಸಿ, ಕೆರೆ ಏರಿಯನ್ನು ಉತ್ತಮ ಗುಣಮಟ್ಟದಲ್ಲಿ ದುರಸ್ತಿಪಡಿಸುವ ಮೂಲಕ ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿಕೊಡುವುದಾಗಿ ತಿಳಿಸಿದರು. ಅಲ್ಲದೆ ಅತಿವೃಷ್ಟಿ ಸಂಭವಿಸಿದ ಪ್ರದೇಶಗಳಿಗೆ ಭೇಟಿ ನೀಡಿದ ಸಮಯದಲ್ಲಿ ನೀಡಿದ ಎಲ್ಲಾ ಭರವಸೆಗಳನ್ನು ಈಗಾಗಲೇ ಈಡೇರಿಸಲಾಗಿದ್ದು, ನಿರಾಶ್ರಿತರು ಸಂಬಂಧಪಟ್ಟ ದಾಖಲೆಗಳನ್ನು ನೀಡಿ ಮನೆಗಳನ್ನು ನಿರ್ಮಿಸಿಕೊಳ್ಳುವಂತೆ ಹೇಳಿದರು.
ಮನೆ ನಿರ್ಮಾಣದ ಬಗ್ಗೆ ಇದುವರೆಗೂ ಯಾವುದೇ ಸಮಸ್ಯೆ ಉಂಟಾಗಿಲ್ಲ. ಮನೆಗಳ ನಿರ್ಮಾಣಕ್ಕೆ ಮುಂಗಡ ಹಣವನ್ನು ಕಾಯ್ದಿರಿಸಲಾಗಿದೆ. ರಾಜ್ಯದಲ್ಲಿ ಮನೆ ಕಳೆದುಕೊಂಡವರಿಗೆ ರೂ. 5 ಲಕ್ಷ ನೀಡಲಾಗುತ್ತಿದೆ. ಫಲಾನುಭವಿಗಳು ಮುಂದೆ ಬಂದು ಮನೆಗಳನ್ನು ನಿರ್ಮಿಸಿಕೊಳ್ಳಲು ಮುಂದಾಗಬೇಕು ಎಂದರು.
ಜಿಲ್ಲೆಯ ಎಲ್ಲಾ ಕೆರೆಗಳನ್ನು ವೀಕ್ಷಿಸಿ ಪರಿಹಾರ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಲಾಗುವುದು. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳ ನಿರ್ಮಾಣಕ್ಕೆ ಅರ್ಹ ಫಲಾನುಭವಿಗಳಿಗೆ ಪರಿಹಾರ ತಲುಪುವಂತೆ ಕ್ರಮ ವಹಿಸಬೇಕು ಎಂದು ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.