ಚಿಕ್ಕಮಗಳೂರು: ಜಿಲ್ಲೆಗೆ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಆರೋಗ್ಯ ಸಚಿವ ಶ್ರೀರಾಮುಲು ನಂತರ ಜಿಲ್ಲಾ ಆರೋಗ್ಯ ಇಲಾಖೆಯ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದ್ರು.
ನಗರದಲ್ಲಿರುವ ಪ್ರವಾಸಿ ಮಂದಿರಕ್ಕೆ ಆಗಮಿಸುತ್ತಿದ್ದಂತೆಯೇ ಜಿಲ್ಲಾ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಬಿಜೆಪಿ ಕಾರ್ಯಕರ್ತರು ಅದ್ಧೂರಿಯಾಗಿ ಸಚಿವರನ್ನು ಸ್ವಾಗತಿಸಿದರು. ನಂತರ ಜಿಲ್ಲಾ ಆರೋಗ್ಯ ಸಿಬ್ಬಂದಿ ಜೊತೆ ಮಾತನಾಡಿದ ಶ್ರೀರಾಮುಲು, ಅವರ ಸಮಸ್ಯೆಗಳು ಹಾಗೂ ಕೆಲಸದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಈ ವೇಳೆ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ಗುತ್ತಿಗೆ ಕಾರ್ಮಿಕರು ತಮ್ಮ ಸಂಕಷ್ಟಗಳನ್ನು ಹೇಳಿಕೊಂಡ್ರು. ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸುವ ಭರವಸೆಯನ್ನು ಸಚಿವರು ನೀಡಿದ್ರು. ನಂತರ ಚಿತ್ರದುರ್ಗದ ಮಾಜಿ ಸಂಸದ ಚಂದ್ರಪ್ಪ ಅವರಿಗೆ ಸಚಿವ ಶ್ರೀರಾಮುಲು ಅವರು ತಮ್ಮ ಮಗಳ ವಿವಾಹ ಆಮಂತ್ರಣ ಪತ್ರಿಕೆ ನೀಡಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಆರೋಗ್ಯ ಸಚಿವರಿಗೆ ಮನವಿ ಪತ್ರ ಸಲ್ಲಿಸಿದ್ದು, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾ ಸರ್ಜನ್ ಆಗಿ ಕೆಲಸ ಮಾಡುತ್ತಿರುವ ಕುಮಾರ್ ನಾಯಕ್ ಅವರು ಜನಾನುರಾಗಿಯಾಗಿ ಕೆಲಸ ಮಾಡುತ್ತಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಆಸ್ಪತ್ರೆ ಸುಸ್ಥಿತಿಗೆ ಬರಲು ಅವರು ಶ್ರಮಿಸುತ್ತಿದ್ದಾರೆ. ಆದರೆ ಈ ಜಿಲ್ಲೆಯಲ್ಲಿ ಬಹುತೇಕ ಇಲಾಖೆಯಲ್ಲಿ ಕೆಳ ವರ್ಗದ ನೌಕರರಿಗೆ ಜಾತಿ ಕಾರಣ ಇಟ್ಟುಕೊಂಡು ವರ್ಗಾವಣೆ ಮಾಡಲು ಶಿಫಾರಸು ಮಾಡಿದ್ದು, ತಮ್ಮ ಜಾತಿಯವರನ್ನು ತರುವ ಪ್ರಯತ್ನ ನಡೆಸುತ್ತಿದ್ದಾರೆ. ಹೀಗಾಗಿ ಜಿಲ್ಲಾ ಸರ್ಜನ್ ಅವರ ವರ್ಗಾವಣೆ ರದ್ದು ಮಾಡಿ ಇಲ್ಲಿಯೇ ಸೇವೆ ಮಾಡಲು ಅವರಿಗೆ ಅವಕಾಶ ಮಾಡಿಕೊಡಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಮನವಿ ಸಲ್ಲಿಸಿದರು.