ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿ.ಪಂ. ಸರ್ವ ಸದಸ್ಯರ ಸಭೆಯಲ್ಲಿ ಕೋವಿಡ್ ವಿಚಾರದಲ್ಲಿ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಕೆಲ ಅಧಿಕಾರಿಗಳ ಬೇಜವಾಬ್ದಾರಿತನ ಮತ್ತು ದುರ್ವರ್ತನೆ ಬಗ್ಗೆ ಸಭೆಯಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ.
ಕೊರೊನಾ ವೈರಸ್ ಬಂದಿರುವ ಪರಿಸ್ಥಿತಿಯಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಸರಿಯಾದ ಮಾಹಿತಿಯನ್ನು ಕೊಡುವ ಕೆಲಸ ಮಾಡಬೇಕಾಗಿದೆ. ಆದರೆ ಕೆಲ ಅಧಿಕಾರಿಗಳು ಅಸಡ್ಡೆ ಹಾಗೂ ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವುದು ಮತ್ತು ಅಕ್ರಮ, ಅವ್ಯವಹಾರಗಳನ್ನು ಮಾಡುತ್ತಿರುವುದು ದುರದೃಷ್ಟಕರ ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.
ಈ ಕೋವಿಡ್ ವೈರಸ್ ಬಂದಿರುವ ಸಂದರ್ಭದಲ್ಲಿ ಅಧಿಕಾರಿಗಳಿಗೆ ಕೋವಿಡ್ ಕೆಲಸ ಬಿಟ್ಟು ಬೇರೇನೂ ಕೆಲಸವಿಲ್ಲ. ಪ್ರಮುಖವಾಗಿ ಕೋವಿಡ್ ನಿವಾರಣೆಗೆ ಆದ್ಯತೆ ನೀಡಿ, ನಿಯಂತ್ರಿಸುವ ಕೆಲಸ ಮಾಡಬೇಕಾಗಿದೆ ಹಾಗೂ ಈ ಬಗ್ಗೆ ಜನಪ್ರತಿನಿಧಿಗಳಿಗೆ ಸರಿಯಾದ ರೀತಿಯ ಮಾಹಿತಿ ಕೊಡಬೇಕಾಗಿದೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಆಡಳಿತ ಪಕ್ಷದವರು ವಿರೋಧ ಪಕ್ಷದ ಶಾಸಕರ ಅಭಿಪ್ರಾಯಗಳನ್ನು ತೆಗೆದುಕೊಂಡು ನಿರ್ಧಾರ ತೆಗೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಏಕಾಭಿಪ್ರಾಯದ ಮೂಲಕ ಯಾವುದೇ ರೀತಿಯ ಕೆಲಸಗಳನ್ನು ಮಾಡುವುದು ಸರಿಯಲ್ಲ ಅಂತ ಕೆಲ ಅಧಿಕಾರಿಗಳ ವಿರುದ್ಧ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಸಭೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ.