ಚಿಕ್ಕಮಗಳೂರು: ಕಳೆದ ಕೆಲವು ವರ್ಷಗಳಲ್ಲಿನ ಹವಾಮಾನ ವೈಪರೀತ್ಯದಿಂದ ತೀವ್ರತರದ ಸಂಕಷ್ಟದಲ್ಲಿರುವ ರಾಜ್ಯದ ಕಾಫಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿಯಾಗಿ ಕಾಫಿ ಬೆಳೆಗಾರರ ಸಮಸ್ಯೆ ಪರಿಹರಿಸುವಂತೆ ಮನವಿ ಸಲ್ಲಿಸಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಮಲೆನಾಡಿನ ಕಾಫಿ ಬೆಳೆಗಾರರು ನಿತ್ಯವೂ ಅತಿವೃಷ್ಟಿ, ಅನಾವೃಷ್ಟಿ, ಕಾರ್ಮಿಕರ ಸಮಸ್ಯೆ, ರೋಗಬಾಧೆ, ಬೆಳೆಗೆ ತಕ್ಕ ಬೆಲೆ ಇಲ್ಲದಿರುವುದು ಸೇರಿದಂತೆ ಒಂದಲ್ಲಾ ಒಂದು ರೀತಿಯ ಸಮಸ್ಯೆಗಳಿಂದ ಬಸವಳಿದ ಕಾಫಿ ಉದ್ಯಮವನ್ನು ಪುನಃಶ್ಚೇತನಗೊಳಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಪರಿಹಾರ ಕ್ರಮ ಕೈಗೊಂಡು ಬೆಳೆಗಾರರ ಸಂಕಷ್ಟಕ್ಕೆ ಸಹಾಯ ಮಾಡುವಂತೆ ಸಂಸದೆ ಶೋಭಾ ಕರಂದ್ಲಾಜೆ ದೆಹಲಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಕಾಫಿ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ಭರವಸೆ ನೀಡಿದ್ದಾರೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.