ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚೇಗು ಗ್ರಾಮದಲ್ಲಿ ನಿರಂತರ ಮಳೆಯಿಂದಾಗಿ ರಸ್ತೆ ಕೆಸರು ಗದ್ದೆಯಂತಾಗಿದ್ದು, ಗ್ರಾಮಸ್ಥರು ಪರದಾಡುತ್ತಿದ್ದಾರೆ.
ಆಟೋ ಸೇರಿದಂತೆ ವಾಹನಗಳು ರಸ್ತೆಯಲ್ಲಿ ಸಿಲುಕಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಮೂಲಭೂತ ಸೌಕರ್ಯಕ್ಕಾಗಿ ಚೇಗು ಗ್ರಾಮಸ್ಥರು ನಿತ್ಯ ಜಿಲ್ಲಾಧಿಕಾರಿ ಕಚೇರಿ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಅಲ್ಲದೇ ಸ್ಥಳೀಯ ಶಾಸಕ ಎಂ. ಪಿ. ಕುಮಾರಸ್ವಾಮಿ ಅವರಿಗೂ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ರೋಗಿಗಳು, ಗರ್ಭಿಣಿಯರು, ಶಾಲಾ ಮಕ್ಕಳು ಪಟ್ಟಣಕ್ಕೆ ತೆರಳಬೇಕಾದರೆ ನಿತ್ಯವೂ ಇದೇ ರಸ್ತೆಯಲ್ಲಿ ಸಂಚರಿಸಬೇಕಿದೆ. ಹಾಗಾಗಿ ಆದಷ್ಟು ಬೇಗ ಚೇಗು ಗ್ರಾಮಕ್ಕೆ ಉತ್ತಮ ರಸ್ತೆ ನಿರ್ಮಾಣ ಮಾಡಿಕೊಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.