ಚಿಕ್ಕಮಗಳೂರು/ಧಾರವಾಡ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಚಿಕ್ಕಮಗಳೂರು ಹಾಗೂ ಧಾರವಾಡದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ವಿವಿಧ ಪಕ್ಷ ಹಾಗೂ ಪ್ರಗತಿಪರ ಸಂಘಟನೆಗಳ ಸಂಯುಕ್ತ ವೇದಿಕೆಯಿಂದ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಸಂಸತ್ತಿನ ಉಭಯ ಸದನಗಳಲ್ಲಿ ಬಹುಮತವೆಂಬ ಸಂಖ್ಯಾ ಬಲದ ಆಧಾರದಲ್ಲಿ ಅಂಗೀಕರಿಸಿರುವ ಪೌರತ್ವ ತಿದ್ದುಪಡಿ ಮಸೂದೆಯು ನಮ್ಮ ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿದ್ದು, ಈ ಮಸೂದೆಯನ್ನು ರದ್ದುಪಡಿಸುವ ಮೂಲಕ ಭಾರತದ ಜಾತ್ಯಾತೀತ ಮತ್ತು ಧರ್ಮನಿರಪೇಕ್ಷಕ ತತ್ವಗಳನ್ನು ಎತ್ತಿ ಹಿಡಿಯಲು ಮುಂದಾಗಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಧಾರವಾಡದಲ್ಲಿ ಎಐಡಿಎಸ್ಓ ಸಂಘಟನೆಯ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿ, ತಿದ್ದುಪಡಿ ಮಸೂದೆಯನ್ನು ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಮತ್ತು ಅಲಿಘಡ್ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕೂಡಾ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರು. ಆ ವೇಳೆ ಕಿಡಿಗೇಡಿಗಳು ಮಾಡಿದ ಗಲಿಬಿಲಿಯಿಂದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಗೋಲಿಬಾರ್ ನಡೆಸಿ ಪರಿಣಾಮ ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ದಿನ ವಿದ್ಯಾರ್ಥಿಗಳ ಚಳವಳಿಯಲ್ಲಿ ಕರಾಳ ದಿನ. ಅದಕ್ಕಾಗಿ ಈ ದಾಳಿಗೆ ಹೊಣೆಗಾರರಾಗಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿಗಳು ಮತ್ತು ಎಐಡಿಎಸ್ಓ ಸಂಘಟನೆ ಕಾರ್ಯಕರ್ತರು ಒತ್ತಾಯಿಸಿದರು.