ಚಿಕ್ಕಮಗಳೂರು : ಕೇಂದ್ರ ಸರ್ಕಾರ ಚೀನಾ ಗಡಿ ವಿಚಾರದಲ್ಲಿ ನಿರ್ಲಕ್ಷ್ಯ ಮನೋಭಾವ ತಾಳಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ನಗರದ ಕೋರ್ಟ್ ಆವರಣದ ಪಕ್ಕದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಗೂ ಮುನ್ನ ಚೀನಾ ಗಡಿಯಲ್ಲಿ ಹೋರಾಟ ಮಾಡಿ ಹುತಾತ್ಮರಾದ ಭಾರತೀಯ ಯೋಧರಿಗೆ ಕ್ಯಾಂಡಲ್ ಬೆಳಗಿ ಗೌರವ ನಮನ ಸಲ್ಲಿಸಲಾಯಿತು.
ಕೇಂದ್ರ ಸರ್ಕಾರ ಚೀನಾ ಗಡಿ ವಿಚಾರದಲ್ಲಿ ನಿರ್ಲಕ್ಷ್ಯ ಮನೋಭಾವ ತಾಳಿದೆ. ಜೊತೆಗೆ ಚೀನಾ ಗಡಿಯಲ್ಲಿ ಹೋರಾಟ ಮಾಡುತ್ತಿರುವ ಭಾರತೀಯ ಯೋಧರಿಗೆ ಶಕ್ತಿ ಹಾಗೂ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿಲ್ಲ, ಕೇಂದ್ರದ ಗೃಹ ಸಚಿವರು ಹಾಗೂ ಪ್ರಧಾನ ಮಂತ್ರಿಯವರು ವಿಭಿನ್ನವಾದ ಹೇಳಿಕೆ ನೀಡಿ ಜನರಲ್ಲಿ ಗೊಂದಲ ಮೂಡಿಸುತ್ತಿದ್ದು, ಚೀನಾ ಗಡಿ ವಿಚಾರದಲ್ಲಿಯೂ ಇವರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.