ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣದ ಬಂಧಿತ ಆರೋಪಿ ಪಿಎಸ್ಐ ಅರ್ಜುನ್ಗೆ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಇಂದು ಬೆಳಗ್ಗೆ ಅರ್ಜುನ್ ಅವರನ್ನು ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕರೆತಂದ ಸಿಐಡಿ ಪೊಲೀಸರ ತಂಡ, ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಈ ವೇಳೆ ನ್ಯಾಯಾಧೀಶೆ ಪುಷ್ಪಾಂಜಲಿ ಆರೋಪಿಯನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಠಾಣೆಯಲ್ಲಿ ಅರ್ಜುನ್ ಪಿಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದು, ಮೇ 10 ರಂದು ದಲಿತ ಯುವಕ ಪುನೀತ್ ಎಂಬಾತ ಮೇಲೆ ಠಾಣೆಯಲ್ಲೇ ದೈಹಿಕ ಹಲ್ಲೆ ನಡೆಸಿ ಮೂತ್ರ ಕುಡಿಸಿದ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ಸಂತ್ರಸ್ತ ಯುವಕ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದನು.
ಆ ಬಳಿಕ ಪಿಎಸ್ಐ ವಿರುದ್ಧ ಗೋಣಿಬೀಡು ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಸರ್ಕಾರ ಅರ್ಜುನ್ ಅವರನ್ನು ಅಮಾನತು ಮಾಡಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಈ ನಡುವೆ ಬಂಧನಕ್ಕೊಳಗಾಗುವುದರಿಂದ ತಪ್ಪಿಸಿಕೊಳ್ಳಲು ಪಿಎಸ್ಐ ಅರ್ಜುನ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಸೆ.01 ರಂದು ಸಿಐಡಿ ಪೊಲೀಸರು ಬೆಂಗಳೂರಿನಲ್ಲಿ ಅರ್ಜುನ್ ಅವರನ್ನು ಬಂಧಿಸಲಾಗಿತ್ತು.
ಓದಿ: PSI ಮೂತ್ರ ಕುಡಿಸಿದ ಪ್ರಕರಣ ಸಂಬಂಧ ವಿಡಿಯೋ ಹರಿಬಿಟ್ಟ ಯುವಕ ಹೇಳಿದ್ದಿಷ್ಟು..