ಚಿಕ್ಕಮಗಳೂರು : ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಳೆ ಅಬ್ಬರ ಜೋರಾಗಿದ್ದು, ಹಲವೆಡೆ ಅವಾಂತರ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಮತ್ತು ಪ್ರವಾಸಿಗರ ನೆಚ್ಚಿನ ತಾಣ ಮುಳ್ಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಮುಳ್ಳಯ್ಯನಗಿರಿ ರಸ್ತೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ನಿರಂತರ ಮಳೆಗೆ ಜಿಲ್ಲೆಯಲ್ಲಿ ಹಲವೆಡೆ ಭೂ ಕುಸಿತ ಸಂಭವಿಸಿದೆ. ಮುಳ್ಳಯ್ಯನಗಿರಿ ರಸ್ತೆಯಲ್ಲಿ 5 ಕಡೆಗಳಲ್ಲಿ ಭೂಕುಸಿದಿದೆ. ಹೀಗಾಗಿ ಪ್ರವಾಸಿಗರಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಸ್ಥಳದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಮಳೆಯ ನಡುವೆ ಪ್ರಕೃತಿ ಸೌಂದರ್ಯವನ್ನು ಸವಿಯಲು ಬಂದ ಪ್ರವಾಸಿಗರಿಗೆ ನಿರಾಸೆ ಆಗಿದೆ.
ಮುಳ್ಳಯ್ಯನಗಿರಿ, ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿಯುತ್ತಿದೆ. ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆಯಾಗುತ್ತಿದ್ದು ಮುಳ್ಳಯ್ಯನಗಿರಿ ಮಾರ್ಗದ ರಸ್ತೆಗೆ ಗುಡ್ಡದ ಮಣ್ಣು ನಿರಂತರವಾಗಿ ಕುಸಿಯುತ್ತಿದೆ. ಇದರಿಂದಾಗಿ ರಸ್ತೆ ಸಂಚಾರದಲ್ಲಿ ತೊಡಕುಂಟಾಗಿದೆ. ಮುಳ್ಳಯ್ಯನಗಿರಿಯಲ್ಲೂ ಮಳೆ ಮುಂದುವರೆದಿದ್ದು, ಮತ್ತಷ್ಟು ಗುಡ್ಡ ಕುಸಿಯುವ ಭೀತಿ ಎದುರಾಗಿದೆ.
ಮಲೆನಾಡು ಭಾಗದಲ್ಲೂ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಪೊಲೀಸರಿಗೆ ಪ್ರವಾಸಿಗರನ್ನು ನಿಯಂತ್ರಿಸುವುದೇ ತಲೆನೋವಾಗಿದೆ. ಚಾರ್ಮಾಡಿ ಘಾಟಿಯ ಬಂಡೆ ಮೇಲೆ ಹತ್ತಿ ಪ್ರವಾಸಿಗರು ಹುಚ್ಚಾಟ ನಡೆಸುತ್ತಿದ್ದಾರೆ. ಬಂಡೆ ಮೇಲೆ ಹತ್ತಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದು, ಸ್ವಲ್ಪ ಸಮತೋಲನ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಪೊಲೀಸರು ಎಚ್ಚರಿಸಿದ್ದಾರೆ.
ಈಗಾಗಲೇ ಹಲವರು ಬಿದ್ದು ಕೈ-ಕಾಲು ಮುರಿದುಕೊಂಡಿರುವುದು ಮಾತ್ರವಲ್ಲದೆ ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ದಿನನಿತ್ಯ ಇಂತಹ ಘಟನೆಗಳು ನಡೆಯುತ್ತಿದ್ದು, ಜಿಲ್ಲಾಡಳಿತ, ಪೊಲೀಸರು ಎಷ್ಟೇ ಎಚ್ಚರಿಕೆಯನ್ನು ನೀಡಿದರೂ ಯಾವುದೇ ಪ್ರಯೋಜನ ಆಗುತ್ತಿಲ್ಲ.
ಜಲಪಾತ ನೋಡಲು ಬಂದ ಯುವಕ ಸಾವು : ಬಂಡೆ ಮೇಲೆ ನಿಂತು ಜಲಪಾತ ವೀಕ್ಷಿಸುತ್ತಿದ್ದ ಯುವಕನೊಬ್ಬ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ನೀರುಪಾಲಾಗಿದ್ದ ಘಟನೆ ಉಡುಪಿ ಜಿಲ್ಲೆಯ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ಸಂಭವಿಸಿತ್ತು. ಭದ್ರಾವತಿ ಮೂಲದ ಶರತ್ ಕುಮಾರ್ (23) ಎಂಬವರು ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಘಟನೆಯ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿತ್ತು.
ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಶರತ್ ಕುಮಾರ್ ಬಂಡೆಯ ಮೇಲೆ ನಿಂತು ಧುಮ್ಮಿಕ್ಕುವ ಜಲಪಾತವನ್ನು ವೀಕ್ಷಿಸುತ್ತಿದ್ದರು. ಇದನ್ನು ಆತನ ಸ್ನೇಹಿತ ಮೊಬೈಲ್ನಲ್ಲಿ ಚಿತ್ರೀಕರಿಸುತ್ತಿದ್ದರು. ಈ ವೇಳೆ ಶರತ್ ಕುಮಾರ್ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದಿದ್ದಾರೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದರು. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ : Monsoon: ಕರಾವಳಿಯಲ್ಲಿ ಭಾರಿ ಮಳೆ.. ಜನಜೀವನ ಅಸ್ತವ್ಯಸ್ತ, ನಾಳೆ ಕೊಡಗಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ