ಚಿಕ್ಕಮಗಳೂರು: ಕೊರೊನಾ ವೈರಸ್ ಆತಂಕದ ನಡುವೆ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಜೂನ್ 18ರಂದು ನಡೆಯಲಿದ್ದು, ಮಕ್ಕಳ ಸುರಕ್ಷತೆಗಾಗಿ ಜಿಲ್ಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.
ಜಿಲ್ಲೆಯ 18 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಯಲ್ಲಿ 9,986 ವಿದ್ಯಾರ್ಥಿಗಳು ಮತ್ತು ಹೊರ ಜಿಲ್ಲೆಯಿಂದ ಇಲ್ಲಿಗೆ ಬರುವ 1,300 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲಾದ್ಯಂತ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ಹಮ್ಮಿಕೊಳ್ಳಲಾಗುತ್ತಿದೆ.
ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸ್ಯಾನಿಟೈಸರ್ ಸಿಂಪಡಿಸಲಾಗಿದೆ. ಒಂದು ಕೊಠಡಿಯಲ್ಲಿ ಗರಿಷ್ಠ 24 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಾಸ್ಕ್ ಧರಿಸುವುದು ಕಡ್ಡಾಯ. ಕುಡಿಯುವ ನೀರಿನ ಬಾಟಲಿಯನ್ನು ಮನೆಯಿಂದಲೇ ತರಲು ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.
ಪರೀಕ್ಷಾ ಸಮಯಕ್ಕೂ ಒಂದು ಗಂಟೆ ಮುಂಚಿತವಾಗಿ ವಿದ್ಯಾರ್ಥಿಗಳು ಬರಬೇಕು. ಮಕ್ಕಳಿಗೆ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸ್ ಮಾಡಲು ಪಿಯು ಪರೀಕ್ಷಾ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಇಂಗ್ಲಿಷ್ ವಿಷಯದ ಪರೀಕ್ಷೆ ಮಾರ್ಚ್ 23ರಂದು ನಡೆಯಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಮುಂದೂಡಲಾಗಿತ್ತು.