ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಕೆಲ ಅವಾಂತರಗಳನ್ನು ಸೃಷ್ಟಿಸಿದೆ.
ಮೂಡಿಗೆರೆ ತಾಲೂಕಿನ ಬಂಕೇನಹಳ್ಳಿ ಗ್ರಾಮದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿದ್ದ ಸೇತುವೆ ಕುಸಿದಿದೆ. ಎಡಬಿಡದೆ ಸುರಿದ ಮಳೆಯಿಂದಾಗಿ ಸೇತುವೆ ಕುಸಿದಿದ್ದು, ಈ ಘಟನೆಯಿಂದ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.
ಕಳೆದ ವರ್ಷ ಸುರಿದ ಭಾರೀ ಮಳೆಗೆ ಸಹ ಬಂಕೇನಹಳ್ಳಿ ಗ್ರಾಮದ ಸೇತುವೆ ಕೊಚ್ಚಿ ಹೋಗಿತ್ತು. ಹಾಗಾಗಿ ತಾತ್ಕಾಲಿಕವಾಗಿ ಸೇತುವೆ ನಿರ್ಮಾಣ ಮಾಡಿಕೊಳ್ಳಲಾಗಿತ್ತು. ಆದರೆ, ಇಂದು ಮತ್ತೆ ಸೇತುವೆ ಕುಸಿದ ಪರಿಣಾಮ ಕೂಡಳ್ಳಿ, ಬಂಕೇನಹಳ್ಳಿ, ಚೇಗು ಮುಂತಾದ ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಮಳೆಗಾಲ ಪ್ರಾರಂಭದಲ್ಲೇ ಸೇತುವೆ ಕುಸಿದಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.