ಚಿಕ್ಕಮಗಳೂರು: ಪ್ರತಿ ವರ್ಷ ದೀಪಾವಳಿ ಸಮಯದಲ್ಲಿ ಮಾತ್ರ ಭಕ್ತರಿಗೆ ದರ್ಶನ ನೀಡುವ ಬೆಟ್ಟದ ದೇವಿರಮ್ಮ ದೇವಸ್ಥಾನ ತೆರೆಯಲಾಗಿದ್ದು, ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದು ಪುನೀತರಾದರು. ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ 3 ಸಾವಿರ ಅಡಿಗಳಷ್ಟು ಎತ್ತರದ ಗುಡ್ಡದಲ್ಲಿರುವ ಬಿಂಡಿಗ ದೇವಿರಮ್ಮ ದೇವಸ್ಥಾನದಲ್ಲಿ ದೇವರಿಗೆ ಮೂರು ದಿನಗಳ ಕಾಲ ವಿಶೇಷ ಪೂಜೆ ಇದ್ದು, ದೇವಿಯನ್ನು ನೋಡಲು ಜನಸಾಗರವೇ ಹರಿದು ಬಂದಿದೆ.
ಭಕ್ತರು ಬರಿಗಾಲಲ್ಲಿ ಕಾಡು-ಮೇಡು ಅಲೆದು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಜಿಲ್ಲಾಡಳಿತ ಕೂಡ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಸೌಲಭ್ಯ ಹಾಗೂ ಭದ್ರತೆ ಒದಗಿಸಿದೆ. ಪ್ರತಿ ವರ್ಷ 50 ಸಾವಿರಕ್ಕೂ ಅಧಿಕ ಭಕ್ತರು ಬೆಟ್ಟ ಹತ್ತುತ್ತಿದ್ದರು. ಆದರೆ, ಈ ವರ್ಷ ಮಧ್ಯ ರಾತ್ರಿಯಿಂದಲೇ ಬೆಟ್ಟ ಹತ್ತಿದ ಭಕ್ತರ ಸಂಖ್ಯೆ ಅಂದಾಜು 80 ಸಾವಿರ ದಾಟಿದೆ. ಸಂಜೆ ವೇಳೆಗೆ ಲಕ್ಷದ ಗಡಿಯೂ ಮುಟ್ಟುವ ಸಾಧ್ಯತೆಯಿದೆ. ದೀಪಾವಳಿ ಅಮವಾಸ್ಯೆಯ ಹಿಂದಿನ ದಿನ ಬೆಟ್ಟದಲ್ಲಿರೋ ಶಿವನ ಅಸ್ತ್ರಗಳುಳ್ಳ ದುರ್ಗೆಗೆ ವಿಶೇಷ ಪೂಜೆ ನಡೆಯುತ್ತದೆ. ಆ ಪೂಜೆಯನ್ನು ನೋಡಿ ಕಣ್ತುಂಬಿಕೊಳ್ಳಲು ಭಕ್ತರು ಬಿಂಡಿಗ ಗ್ರಾಮಕ್ಕೆ ಆಗಮಿಸುತ್ತಾರೆ.
ಹರಕೆ ಕಟ್ಟಿದ ಭಕ್ತರು ಇಲ್ಲಿಗೆ ಒಂದು ದೇವಿಗೆ ಹರಕೆ ತೀರಿಸುತ್ತಾರೆ. ಕಲ್ಲು-ಬಂಡೆ, ಮುಳ್ಳುಗಳ ಬೆಟ್ಟದಲ್ಲಿ ಭಕ್ತರು ಹಿಂದಿನ ರಾತ್ರಿ 10 ಗಂಟೆಯಿಂದಲೇ ಬೆಟ್ಟ ಹತ್ತೋಕೆ ಶುರು ಮಾಡಿ ದೇವಿಯ ದರ್ಶನ ಪಡೆದು, ಕೆಳಗಿಳಿಯುತ್ತಾರೆ. ಬೆಟ್ಟವನ್ನೇರುವಾಗಿ ಕೊಂಚ ಎಡವಿದರೂ ಅನಾಹುತ ಸಂಭವಿಸುವ ಸಾಧ್ಯತೆಯೂ ಇದೆ.
ಇಲ್ಲಿ ಹರಕೆ ಕಟ್ಟಿಕೊಂಡೋರು ಬೆಟ್ಟ ಹತ್ತುವಾಗ ಎಷ್ಟೇ ಕಷ್ಟವಾದರೂ ಅವರ ಶಕ್ತಿಗನುಸಾರವಾಗಿ ಸೌದೆಯನ್ನು ಹೊತ್ತೊಯ್ಯುತ್ತಾರೆ. ಇದರ ಜೊತೆಗೆ, ಸೀರೆ, ತುಪ್ಪ, ಬೆಣ್ಣೆ, ಕಾಯಿ, ಬಾಳೆಹಣ್ಣನ್ನು ದೇವಿಗೆ ಸಮರ್ಪಿಸುತ್ತಾರೆ. ಸಮುದ್ರ ಮಟ್ಟದಿಂದ ಸುಮಾರು 3 ಸಾವಿರ ಅಡಿ ಎತ್ತದಲ್ಲಿರೋ ದೇವಿರಮ್ಮನ ಬೆಟ್ಟದಲ್ಲಿ ವರ್ಷಕ್ಕೊಮ್ಮೆ ಮಾತ್ರ ಪೂಜೆ ನಡೆಯುವುದು ವಿಶೇಷ. ವ್ರತದ ಮೂಲಕ ಹರಕೆ ಕಟ್ಟಿ ಉಪವಾಸವಿದ್ದವರು ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಬೆಟ್ಟದಲ್ಲಿ ಸಂಜೆ ದೀಪ ಬೆಳಗಿದ ನಂತರವೇ ಊಟ ಮಾಡುತ್ತಾರೆ. ಇಂದು ಸಂಜೆ ಭಕ್ತರು ತಂದ ಸೌದೆ, ಎಣ್ಣೆ, ಬೆಣ್ಣೆ, ಸೀರೆ, ರವಕೆಗಳಿಗೆ ಅಗ್ನಿ ಸ್ಪರ್ಶ ಮಾಡಿದ ಮೇಲೆ ಚಿಕ್ಕಮಗಳೂರಿನ ಸುತ್ತಮುತ್ತಲಿನ ಜನ ಆ ಜ್ಯೋತಿಯನ್ನು ನೋಡಿದ ಬಳಿಕ ಅದಕ್ಕೆ ಆರತಿ ಮಾಡಿ ದೀಪಾವಳಿಯನ್ನು ಆಚರಿಸುತ್ತಾರೆ.
ಈ ಬೆಟ್ಟದ ತಾಯಿಗೂ ಮೈಸೂರು ಅರಸರಿಗೂ ಅವಿನಾಭಾವ ಸಂಬಂಧದ್ದು, ಇಂದಿಗೂ ಮೈಸೂರಿನ ಅರಮನೆಯಿಂದ ಈ ದೇವಾಲಯಕ್ಕೆ ಎಣ್ಣೆ, ಸೀರೆ, ಅರಿಶಿನ-ಕುಂಕುಮ ಸೇರಿದಂತೆ ಪೂಜೆ ವಸ್ತುಗಳು ಬರುತ್ತವೆ.
ಇದನ್ನೂ ಓದಿ: ರಾಯಚೂರು: ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದಲ್ಲಿ ದೀಪಾವಳಿ ಸಂಭ್ರಮ, ವಿಶೇಷ ಪೂಜೆ