ಚಿಕ್ಕಮಗಳೂರು: ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ವಾಹನ ಸಂಚಾರಕ್ಕೆ ಸಮಯ ನಿಗದಿ ಮಾಡಲಾಗಿದೆ.
ಕಳೆದ ವರ್ಷದ ಮಳೆಗಾಲದಲ್ಲಿ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ಪ್ರದೇಶದ ಕೆಲ ಭಾಗಗಳಲ್ಲಿ ಗುಡ್ಡ ಕುಸಿತ ಹಾಗೂ ರಸ್ತೆ ಕುಸಿತ ಉಂಟಾಗಿತ್ತು. ಈಗಾಗಲೇ ಮಲೆನಾಡು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಚಾರ್ಮಾಡಿ ಘಾಟಿ ಪ್ರದೇಶದಲ್ಲಿಯೂ ಉತ್ತಮ ಮಳೆಯಾಗುತ್ತಿದೆ.
ಮತ್ತೆ ಈ ಭಾಗದಲ್ಲಿ ರಸ್ತೆ ಕುಸಿತ ಹಾಗೂ ಗುಡ್ಡ ಕುಸಿತ ಉಂಟಾಗಬಹುದು ಎಂಬ ಕಾರಣದಿಂದ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಬೆಳಗ್ಗೆ 7 ಗಂಟೆಯಿಂದ ರಾತ್ರಿ 7 ಗಂಟೆಯವರೆಗೂ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಬೇರೆ ಸಮಯದಲ್ಲಿ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ಈ ಬಾರಿಯೂ ಜೋರಾಗಿ ಮಳೆಯಾಗುತ್ತಿದ್ದು, ಅಲ್ಲಲ್ಲಿ ಮಣ್ಣು ಕುಸಿಯುತ್ತಿದೆ. ಮಂಜು ಕವಿದ ವಾತವರಣ, ರಸ್ತೆಗಳ ಪಕ್ಕದಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಾಣ ಆಗಿರುವ ಹಿನ್ನೆಲೆ ರಾತ್ರಿಯ ವೇಳೆ ಈ ಭಾಗದಲ್ಲಿ ವಾಹನಗಳ ಸಂಚಾರ ಸೂಕ್ತವಲ್ಲ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಈ ಆದೇಶ ಹೊರಡಿಸಿದ್ದಾರೆ.