ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು ಕೂಡ ವರುಣನ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ ರಾಜ್ಯ ಹೆದ್ದಾರಿಯಲ್ಲಿ ಎರಡು ಬೃಹತ್ ಮರ ಧರೆಗುರುಳಿವೆ.
ಮರಗಳು ರಸ್ತೆಗೆ ಉರುಳಿರುವ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿ, ಚಿಕ್ಕಮಗಳೂರು-ಶೃಂಗೇರಿ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಚಿಕ್ಕಮಗಳೂರು ತಾಲೂಕಿನ ಕಣತಿ ಹಾಗೂ ಅರೇನೂರು ಗ್ರಾಮದ ಬಳಿ ಬೃಹತ್ ಗಾತ್ರದ ಮರಗಳು ಧರೆಗುರುಳಿದ್ದು, ಕಳೆದ ಒಂದು ಗಂಟೆಯಿಂದ ವಾಹನ ಸಂಚಾರ ಸ್ಥಗಿತವಾಗಿದೆ. ಭಾರಿ ಗಾತ್ರದ ಮರ ಬಿದ್ದ ಹಿನ್ನೆಲೆ, ತೆರವು ಕಾರ್ಯ ಕೂಡ ವಿಳಂಬವಾಗಿದ್ದು, ಅರಣ್ಯ ಇಲಾಖೆ ಹಾಗೂ ಸ್ಥಳೀಯರಿಂದ ತೆರವು ಕಾರ್ಯಾಚರಣೆ ಮುಂದುವರೆದಿದೆ.
ಮಲೆನಾಡು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ನಾನಾ ಅವಾಂತರಗಳು ಸೃಷ್ಟಿಯಾಗುತ್ತಿವೆ.