ಚಿಕ್ಕಮಗಳೂರು: ಜಿಲ್ಲೆಯಲ್ಲಿ ಈ ದಿನವೂ ಧಾರಾಕಾರ ಮಳೆ ಮುಂದುವರೆದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಬಳಿ ಹೇಮಾವತಿ ನದಿಯಲ್ಲಿ ಮೂರು ದಿನಗಳ ಹಿಂದೆ ಕೊಚ್ಚಿ ಹೋಗಿದ್ದ ತರುವೆ ಗ್ರಾಮದ ವೃದ್ಧೆ ಶವವಾಗಿ ಪತ್ತೆಯಾಗಿದ್ದಾರೆ.
ರತ್ನಮ್ಮ (70) ಸಾವನ್ನಪ್ಪಿದ್ದು, ಹಳ್ಳ ದಾಟಿ ಹೋಗುವಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಎರಡು ಕಿಲೋಮೀಟರ್ ದೂರ ಕೊಚ್ಚಿಹೋಗಿದ್ದ ಮೃತದೇಹವನ್ನು ಪತ್ತೆಹಚ್ಚಲಾಗಿದೆ. ಕಳೆದ ಮೂರು ದಿನಗಳ ಹಿಂದೆ ರತ್ನಮ್ಮ ಕಾಣೆಯಾಗಿದ್ದರು. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಜಿಲ್ಲೆಯ ಮಲೆನಾಡು ಭಾಗವಾದ ಕೊಪ್ಪ, ಜಯಪುರ, ಎನ್ಆರ್ ಪುರ, ಬಾಳೆಹೊನ್ನೂರು, ಕಳಸ, ಶೃಂಗೇರಿ, ಮೂಡಿಗೆರೆ, ಚಾರ್ಮಾಡಿ ಘಾಟ್, ಈ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಭದ್ರಾ, ತುಂಗ, ಹೇಮಾವತಿ ನದಿಗಳು ಮೈದುಂಬಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಳಸದ ಹೆಬ್ಬಾಳ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು, ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದೆ.