ಚಿತ್ರದುರ್ಗ: ಜಿಲ್ಲೆಯಲ್ಲಿರುವ 15 ಹಾಸಿಗೆಗಳ 11 ಸಮುದಾಯ ಆರೋಗ್ಯ ಕೇಂದ್ರಗಳನ್ನು ಪ್ರತ್ಯೇಕವಾಗಿ ಕಾಯ್ದಿರಿಸುವ ಮೂಲಕ ಕೋವಿಡ್ ಹೆಲ್ತ್ ಕೇರ್ ಸೆಂಟರ್ಗಳಾಗಿ ಪರಿವರ್ತಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪಾಲಾಕ್ಷ ತಿಳಿಸಿದರು.
ಹಿರಿಯೂರು ತಾಲೂಕಿನ ಮರಡಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಜಿಲ್ಲಾಡಳಿತದ ನಿರ್ದೇಶನದಂತೆ ಕೊರೊನಾ ವೈರಸ್ ಹತೋಟಿಗೆ ತರುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಹಿರಿಯೂರು ತಾಲೂಕಿನ ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿಯೂ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಸಮುದಾಯಕ್ಕೆ ಕೊರೊನಾ ವೈರಸ್ ಕುರಿತು ಜಾಗೃತಿ ಮೂಡಿಸಲು ಮತ್ತು ಮನೆ ಮನೆ ಸರ್ವೇ ಕಾರ್ಯ ಕೈಗೊಳ್ಳಲು ವಿವಿಧ ಇಲಾಖೆಗಳು ಸೇರಿ ಆರೋಗ್ಯ ಇಲಾಖೆ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತೆಯರು ಪ್ರತಿದಿನ ನಿಗದಿತ ಮನೆಗಳಿಗೆ ಭೇಟಿ ನೀಡಿ, ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಹಾಗೂ ಸೋಂಕಿತ ಪ್ರದೇಶಗಳಿಂದ ಬಂದಿರುವವರ ಪಟ್ಟಿ ಮಾಡಿ, ಮನೆಯಲ್ಲಿ ಪ್ರತ್ಯೇಕವಾಗಿ ಆರೋಗ್ಯ ಮಾಹಿತಿ ಶಿಕ್ಷಣ ನೀಡುವುದರ ಜೊತೆಗೆ ಕೆಮ್ಮು, ನೆಗಡಿ, ಶೀತದಂತಹ ಲಕ್ಷಣ ಇರುವವರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲು ಯೋಜಿಸಲಾಗಿದೆ ಎಂದರು.