ಚಿತ್ರದುರ್ಗ: ತಿಂಗಳಿಗೆ ₹12 ಸಾವಿರ ಗೌರವ ಧನ ನೀಡಬೇಕು ಎಂದು ಚಿತ್ರದುರ್ಗ ನಗರದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಎಐಯುಟಿಯುಸಿ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಅವರು, ಗೌರವ ಧನವನ್ನು ₹ 12,000ಕ್ಕೆ ಹೆಚ್ಚಿಸಬೇಕು. ಕೆಲಸದ ವೇಳೆ ಅಗತ್ಯ ಸುರಕ್ಷತಾ ಸಾಧನಗಳನ್ನು ನೀಡಬೇಕು ಹಾಗೂ ನಿವೃತ್ತಿ ವೇತನ ಸೌಲಭ್ಯನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಸೋಂಕಿಗೆ ಒಳಗಾಗುವ ಆಶಾ ಕಾರ್ಯಕರ್ತೆಯರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ನಮ್ಮ ಮೇಲೆ ಯಾರಾದರೂ ಹಲ್ಲೆ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬೇಡಿಕೆಗಳನ್ನು ಮುಂದಿಟ್ಟಿದ್ದೇವೆ ಎಂದರು.
ನಮಗೆ ನಿರಾಸೆ ಸಾಕು, ಶ್ರಮಕ್ಕೆ ತಕ್ಕ ವೇತನ ಬೇಕು. ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ನಿರಂತರ ಹೋರಾಟ ಮಾಡುತ್ತಿದ್ದೇವೆ. ಆದರೆ, ಸರ್ಕಾರ ನಿರ್ಲಕ್ಷ್ಯ ಮತ್ತು ಜನವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು.